ಬೆಂಗಳೂರು(ಫೆ.26): ರಾಜ್ಯ ಪದವಿ ಪೂರ್ವ ಕಾಲೇಜುಗಳ 1,203 ಉಪನ್ಯಾಸಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್‌, ನೇಮಕ ಪ್ರಕ್ರಿಯೆ ಮುಂದುವರಿಸಲು ಮಂಗಳವಾರ ಅನುಮತಿ ನೀಡಿದೆ. ಆದರೆ, ನೇಮಕಾತಿ ಪ್ರಕ್ರಿಯೆಯು ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಉಪನ್ಯಾಸಕರ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇತ್ತೀಚೆಗೆ ಪ್ರಕಟಿಸಿದ್ದ ಅಂತಿಮ ಆಯ್ಕೆ ಪಟ್ಟಿರದ್ದುಪಡಿಸುವಂತೆ ಕೋರಿ ಕೆ.ಆರ್‌.ಯೋಗೀಶ್‌ ಸೇರಿ ಹೈದರಾಬಾದ್‌- ಕರ್ನಾಟಕ ಹೊರತುಪಡಿಸಿದ ಪ್ರದೇಶಗಳ ಉದ್ಯೋಗ ವಂಚಿತ ಅಭ್ಯರ್ಥಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಕೆಇಎ ಪ್ರಕಟಿಸಿದ್ದ ಅಂತಿಮ ಆಯ್ಕೆ ಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರ ಮತ್ತು ಕೆಇಎಗೆ ಸೂಚಿಸಿತ್ತು.

ಮಂಗಳವಾರ ಅರ್ಜಿ ಮತ್ತೆ ವಿಚಾರಣೆಗೆ ಬಂದ ವೇಳೆ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿ, ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದ್ದು, ತುರ್ತು ನೇಮಕ ಮಾಡುವ ಅಗತ್ಯವಿದೆ. ಈ ಹಂತದಲ್ಲಿ ಮಧ್ಯಂತರ ತಡೆ ನೀಡಿರುವುದರಿಂದ ನೇಮಕಾತಿ ಪ್ರಕ್ರಿಯೆ ಕುಂಠಿತಗೊಂಡಿದೆ. ಆದ್ದರಿಂದ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಕೋರಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದನ್ನು ಪರಿಗಣಿಸಿದ ನ್ಯಾಯಮೂರ್ತಿ ಎಸ್‌.ಎನ್‌.ಸತ್ಯನಾರಾಯಣ ನೇತೃತ್ವದ ವಿಭಾಗೀಯ ಪೀಠ, ಕೆಇಎ ಪ್ರಕಟಿಸಿದ್ದ ಆಯ್ಕೆ ಪಟ್ಟಿಗೆ ಹೊರಡಿಸಿದ್ದ ಮಧ್ಯಂತರ ತಡೆಯಾಜ್ಞೆ ಆದೇಶವನ್ನು ಮಾರ್ಪಡಿಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿತು. ಆದರೆ, ನೇಮಕಾತಿ ಪ್ರಕ್ರಿಯೆಯು ಅರ್ಜಿ ಸಂಬಂಧ ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿತು.

ಅರ್ಜಿದಾರರ ವಾದವೇನು:

2015ರ ಮೇ 8ರಂದು ರಾಜ್ಯ ಪಿಯು ಕಾಲೇಜುಗಳಲ್ಲಿ ಖಾಲಿಯಿದ್ದ ಒಟ್ಟು 1,203 ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಕೆಇಎ ಅಧಿಸೂಚನೆ ಹೊರಡಿಸಿತ್ತು. 2019ರ ಅ.15ರಂದು ಕನ್ನಡ ಮತ್ತು ಇತರ 18 ವಿಷಯಗಳ ಸಂಬಂಧ ಹಾಗೂ 2019ರ ಅ.25ರಂದು ರಾಜ್ಯಶಾಸ್ತ್ರ ಹಾಗೂ ಇತಿಹಾಸ ವಿಷಯಗಳ ಸಂಬಂಧ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿತ್ತು.

ಈ ಆಯ್ಕೆ ಪಟ್ಟಿಯನ್ನು ಪ್ರಶ್ನಿಸಿರುವ ಅರ್ಜಿದಾರರು, ಅಂತಿಮ ಆಯ್ಕೆ ಪಟ್ಟಿಯಲ್ಲಿ ಕೆಇಎ ಅನುಸರಿಸುವ ಕ್ರಮ ಕಾನೂನು ಬಾಹಿರವಾಗಿದೆ. ಇದರಿಂದ ಹೈ-ಕ ಹೊರತುಪಡಿಸಿದ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಉದ್ಯೋಗ ವಂಚಿತರಾಗಿದ್ದಾರೆ. ಅರ್ಹತೆ ಇಲ್ಲದ ಹೈ-ಕ ಭಾಗದ ಅಭ್ಯರ್ಥಿಗಳು ಕಾನೂನು ಬಾಹಿರವಾಗಿ ಉದ್ಯೋಗಾವಕಾಶ ಪಡೆದಿದ್ದಾರೆ. ಆದ್ದರಿಂದ ಅಂತಿಮ ಆಯ್ಕೆಯ ಪಟ್ಟಿಯನ್ನು ರದ್ದುಪಡಿಸಬೇಕು. 2019ರ ಜೂನ್‌ 1ರಂದು ಪ್ರಕಟಿಸಿದ ಸಂಭ್ಯಾವ ಪಟ್ಟಿಯ ಪ್ರಕಾರವೇ ನಡೆದುಕೊಳ್ಳುವಂತೆ ಸರ್ಕಾರ ಮತ್ತು ಕೆಇಎಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.