'25 ರಂದು ಸಿಎಂ ಮನೆ ಮುಂದೆ ಪ್ರತಿಭಟನೆ'
ಹಾಸನ ಜಿಲ್ಲೆಗೆ ಅನುಮೋದನೆಗೊಂಡಿರುವ ಕಾಮಗಾರಿಗಳ ಹಣವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ| ಸಿಎಂ ಭೇಟಿಯಾಗಿ ಅನುದಾನ ಬಿಡುಗಡೆ ಮಾಡುವಂತೆ ಕೇಳಿಕೊಂಡರೂ ಹಾಸನ ಅನುದಾನ ಬಿಡುಗಡೆ ಮಾಡಿಲ್ಲ| ಹಂತಹಂತವಾಗಿ ಬಿಡುಗಡೆ ಮಾಡುವೆ ಪ್ರತಿಭಟನೆ ಕೈ ಬಿಡಿ: ಸಿಎಂ ಯಡಿಯೂರಪ್ಪ|
ಹಾಸನ/ಬೆಂಗಳೂರು(ಜ.23): ಜೆಡಿಎಸ್ ಆಡಳಿತದಲ್ಲಿ ಹಾಸನ ಜಿಲ್ಲೆಗೆ ಅನುಮೋದನೆಗೊಂಡ ಅಭಿವೃದ್ಧಿ ಕೆಲಸಗಳನ್ನೆಲ್ಲಾ ಬಿಜೆಪಿ ಸರ್ಕಾರದಲ್ಲಿ ತಡೆಹಿಡಿದಿದೆ. ಇದನ್ನು ಖಂಡಿಸಿ ಜ.25 ರಂದು ಮುಖ್ಯಮಂತ್ರಿ ಯಡಿಯೂರಪ್ಪರವರ ನಿವಾಸದ ಮುಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಅನುಮೋದನೆಗೊಂಡಿರುವ ಕಾಮಗಾರಿಗಳ ಹಣವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ. ಸಿಎಂ ಭೇಟಿಯಾಗಿ ಅನುದಾನ ಬಿಡುಗಡೆ ಮಾಡುವಂತೆ ಕೇಳಿಕೊಂಡರೂ ಹಾಸನ ಅನುದಾನ ಬಿಡುಗಡೆ ಮಾಡಿಲ್ಲ ಎಂದರು.
'ಕುಮಾರಸ್ವಾಮಿ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ'
ಈ ಕುರಿತು ಎಚ್.ಕೆ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮೈತ್ರಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ಅನುಮೋದನೆಗೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನವನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೋವಿಡ್-19 ಹಿನ್ನೆಲೆಯಲ್ಲಿ ಆರ್ಥಿಕತೆಯ ಸಂಕಷ್ಟಎದುರಾಗಿತ್ತು. ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಹಂತದಲ್ಲಿದೆ. ತಾವು ಪ್ರಸ್ತಾಪಿಸಿರುವ ಕಾಮಗಾರಿಗಳಿಗೆ ಹಂತಹಂತವಾಗಿ ಅನುದಾನ ನೀಡಲಾಗುವುದು. ಹೀಗಾಗಿ ಉದ್ದೇಶಿತ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.