ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಗದಗ (ಮೇ.26): ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ಅಧಿವೇಶನದ ಸ್ಥಳ ಬದಲಾವಣೆ ಕುರಿತು ಇನ್ನೂ ಸಚಿವ ಸಂಪುಟದಲ್ಲಿ ಯಾವುದೇ ನಿರ್ಣಯವಾಗಿಲ್ಲ ಎಂದರು.

ಈ ಕುರಿತು ಮೇ 29ರಂದು ಮತ್ತೆ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದ್ದು, ಆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬಹುದು ಎಂದರು. ಅಧಿವೇಶನದ ಸ್ಥಳ ಬದಲಾವಣೆ ಕುರಿತು ಹರಿದಾಡುತ್ತಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದ ಮಟ್ಟದಲ್ಲಿ ಯಾವುದೇ ಅಂತಿಮ ತೀರ್ಮಾನ ಆಗಿಲ್ಲ ಎಂದು ಪುನರುಚ್ಚರಿಸಿದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಹತ್ವದ ವಿಷಯವಾಗಿದ್ದು, ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆ ಫಲಾನುಭವಿಗಳಿಗೆ ತೊಂದರೆ ಉಂಟಾಗಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾನದ ಹಕ್ಕು ಕಳೆದುಕೊಂಡರೆ ಗ್ಯಾರಂಟಿ ಸೌಲಭ್ಯಗಳು ನಿಲ್ಲುತ್ತವೆ ಎಂಬ ಭಯ ಜನರಲ್ಲಿ ಇದೆ.

ತೀವ್ರ ಆಕ್ರೋಶ

ಕೆಲವರ ಗ್ಯಾರಂಟಿ ಯೋಜನೆಗಳು ಜಿಎಸ್‌ಟಿ ಸಂಬಂಧಿತ ಕಾರಣಗಳಿಂದ ಸ್ಥಗಿತಗೊಂಡಿದ್ದವು. ಆದರೆ ಸ್ಪಷ್ಟೀಕರಣ ನೀಡಿದವರ ಪ್ರಕರಣಗಳನ್ನು ಮರುಪರಿಶೀಲಿಸಿ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎಚ್.ಕೆ. ಪಾಟೀಲ, ದೇಶದ ಆರ್ಥಿಕ ಸ್ಥಿತಿ ಸರಿಯಾದ ಮಾರ್ಗದಲ್ಲಿ ಇಲ್ಲ ಎಂಬ ಕಾರಣಕ್ಕೆ ಜನರ ಬದುಕನ್ನು ಘಾಸಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ಏನಿದು, ಎರಡು ದಿನಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿರುವುದು? ಚುನಾವಣೆ ಮೂರು ತಿಂಗಳು ನಡೆದಾಗ ಒಂದು ರುಪಾಯಿಯೂ ಹೆಚ್ಚಿಸಲಿಲ್ಲ. ಆಗ ದೇಶದ ಆರ್ಥಿಕ ಪರಿಸ್ಥಿತಿಯ ಕಲ್ಪನೆ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಈಗ ಶನಿವಾರಕ್ಕೊಮ್ಮೆ, ಸೋಮವಾರಕ್ಕೊಮ್ಮೆ ಬೆಲೆ ಏರಿಕೆ ಮಾಡುತ್ತಿರುವುದು ಅತ್ಯಂತ ದುರ್ದೈವದ ಸಂಗತಿ. ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಜನರ ಬದುಕಿನೊಂದಿಗೆ ಚೆಲ್ಲಾಟ ಆಡಬಾರದು ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.