ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು  ಮುಖಂಡರೋರ್ವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. 

ಮದ್ದೂರು (ಮಾ.23) : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ನಾನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಸೂರ್ಯ- ಚಂದ್ರರಷ್ಟೆಸತ್ಯ ಎಂದು ಶಾಸಕ ಕೆ.ಸುರೇಶ್‌ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ನಾಗಮಂಗಲ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ಕೊಪ್ಪ ಹೋಬಳಿ ಆಬಲವಾಡಿಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಯಡವನಹಳ್ಳಿ ಹಾಗೂ ಕಿರಂಗೂರು ಗ್ರಾಮಗಳ ಪರಿಶಿಷ್ಟಜಾತಿ ಮತ್ತು ಪಂಗಡಗಳ ಕಾಲೋನಿಗಳಿಗೆ 1 ಕೋಟಿ ರು. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾಗಮಂಗಲ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಆಕಾಂಕ್ಷಿಗಳಾಗಿ ಟಿಕೆಟ್‌ ಬಯಸಿದ್ದಾರೆ. ಆದರೆ, ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನನ್ನ ಸ್ಪರ್ಧೆ ಖಚಿತ ಎಂದರು.

'ಮೂರರಲ್ಲಿ ಎರಡು ಕಡೆ ಕೈ ಗೆಲುವು : ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ' ...

ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿರುವ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾಸಕರು, ಚುನಾವಣೆಗಳಲ್ಲಿ ಸೋಲು ಗೆಲುವಿನ ಬಗ್ಗೆ ಭವಿಷ್ಯ ನುಡಿಯಲು ಚಲುವರಾಯಸ್ವಾಮಿ ಶಾಸ್ತ್ರಗಾರನೇ ಎಂದು ಲೇವಡಿ ಮಾಡಿದರು.

ಅಧಿಕಾರದಲ್ಲಿರುವ ಪಕ್ಷಗಳು ಉಪ ಚುನಾವಣೆಗಳಲ್ಲಿ ಹಣ ಮತ್ತು ಅಧಿಕಾರದ ಬಲದಿಂದ ಜಯಗಳಿಸುವುದು ಸರ್ವೆ ಸಾಮಾನ್ಯವಾಗಿದೆ. ಇದರಲ್ಲಿ ಬೇರೆ ಪಕ್ಷಗಳು ಶೇ.5 ರಿಂದ 10 ರಷ್ಟುಜಯಗಳಿಸುವುದರಲ್ಲಿ ವಿಶೇಷವಿಲ್ಲ. ಜೆಡಿಎಸ್‌ ಸಹ ಉಪ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರ ಮೂಲಕ ಹೋರಾಟ ನಡೆಸಲಿದೆ ಎಂದರು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ 9000 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನಕ್ಕೆ ತಡೆ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿತ್ತು ಎಂದರು.

ಆನಂತರ ಮುಖ್ಯಮಂತ್ರಿ ಯಡಿಯೂರಪ್ಪ ಜೆಡಿಎಸ್‌ ಶಾಸಕರನ್ನು ಭೇಟಿ ಮಾಡಿ ಶೀಘ್ರವಾಗಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಅನುದಾನ ಬಿಡುಗಡೆ ಮಾಡದಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುವುದು ಖಚಿತ ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಸುರೇಶ್‌ ಗೌಡ ಎಚ್ಚರಿಕೆ ನೀಡಿದರು.