ವಾಟ್ಸಪ್‌ನಲ್ಲಿ ಚುನಾವಣಾ ಪ್ರಚಾರ ಮಾಡಿದ್ರೆ ನೋಟಿಸ್‌ ಬರುತ್ತೆ ಹುಷಾರ್‌..!

ರಾಮನವಮಿ ಹಿನ್ನೆಲೆಯಲ್ಲಿ ಮಂತರ್‌ ಗೌಡ ತಮ್ಮ ವಾಟ್ಸಾಪ್‌ ಗ್ರೂಪ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿ ಕ್ಷೇತ್ರದ ಜನರಿಗೆ ರಾಮನವಮಿಯ ಶುಭಾಶಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಿದ ಮಡಿಕೇರಿ ವಿಧಾನಸಭಾ ಚುನಾವಣಾಧಿಕಾರಿ ಯತೀಶ್‌ ಉಳ್ಳಾಲ. 

If Election Campaign on WhatsApp Will Get Notice in Kodagu grg

ಮಡಿಕೇರಿ(ಏ.01): ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾದ ಮೇಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ವಾಟ್ಸಾಪ್‌ ಗ್ರೂಪ್‌ನಲ್ಲಿ ಪಕ್ಷದ ಚಿಹ್ನೆ ಬಳಸಿ ರಾಮನವಮಿಗೆ ಶುಭ ಕೋರಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಮಂತರ್‌ ಗೌಡ ಅವರಿಗೆ ಚುನಾವಣಾಧಿಕಾರಿ ನೋಟಿಸ್‌ ನೀಡಿದ್ದಾರೆ. ಅದೇ ರೀತಿ, ಕುಶಾಲನಗರ ವಾಟ್ಸಾಪ್‌ ಗ್ರೂಪ್‌ನಲ್ಲಿ ರಾಜಕೀಯ ಪ್ರೇರಿತ ವಿಡಿಯೋ ತುಣುಕು ಹಂಚಿಕೊಂಡಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ವಿ.ಪಿ.ಶಶಿಧರ್‌ ಅವರಿಗೂ ಚುನಾವಣಾಧಿಕಾರಿ ನೋಟಿಸ್‌ ಜಾರಿಗೊಳಿಸಿದ್ದಾರೆ.

ಗುರುವಾರ ರಾಮನವಮಿ ಹಿನ್ನೆಲೆಯಲ್ಲಿ ಮಂತರ್‌ ಗೌಡ ತಮ್ಮ ವಾಟ್ಸಾಪ್‌ ಗ್ರೂಪ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿ ಕ್ಷೇತ್ರದ ಜನರಿಗೆ ರಾಮನವಮಿಯ ಶುಭಾಶಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಚುನಾವಣಾಧಿಕಾರಿ ಯತೀಶ್‌ ಉಳ್ಳಾಲ ಅವರು ನೋಟಿಸ್‌ ಜಾರಿ ಮಾಡಿದ್ದಾರೆ. ‘ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಹೀಗಾಗಿ, ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು’ ಎಂದು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ ತಲುಪಿದ 24 ಗಂಟೆಯೊಳಗೆ ಈ ಬಗ್ಗೆ ಲಿಖಿತವಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.

ಕೊಡಗಿನ ಅಭ್ಯರ್ಥಿಗಳ ಆಯ್ಕೆಗೆ ಮತದಾನದ ಮೂಲಕ ಅಭಿಪ್ರಾಯ ಸಂಗ್ರಹಿಸಿದ ಬಿಜೆಪಿ!

ಅದೇ ರೀತಿ, ಶಶಿಧರ್‌ ಅವರಿಗೆ ನೀಡಿರುವ ನೋಟಿಸ್‌ನಲ್ಲಿ, ‘ನೀವು ಅಡ್ಮಿನ್‌ ಆಗಿರುವ ನಮ್ಮ ಕುಶಾಲನಗರ ವಾಟ್ಸಾಪ್‌ ಗ್ರೂಪ್‌ನ ಮೂಲಕ ಯಾವುದೇ ಪೂರ್ವಾನುಮತಿ ಪಡೆಯದೇ ರಾಜಕೀಯ ಪ್ರೇರಿತ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಈ ಬಗ್ಗೆ ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು? ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯವರಿಂದ ಪೂರ್ವಾನುಮತಿ ಪಡೆಯಬೇಕು’ ಎಂದು ಹೇಳಲಾಗಿದೆ.

ನೋಟಿಸ್‌ನಲ್ಲೇನಿದೆ?

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯವರಿಂದ ಪೂರ್ವಾನುಮತಿ ಪಡೆಯಬೇಕು. ಹೀಗಾಗಿ ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು? 24 ಗಂಟೆಯೊಳಗೆ ಈ ಬಗ್ಗೆ ಲಿಖಿತ ಸಮಜಾಯಿಷಿ ನೀಡಬೇಕು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios