ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪದ ತಂತ್ರಾಂಶ ಅಳವಡಿಕೆ: ಸಚಿವ ಸೋಮಶೇಖರ್
ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪದ ತಂತ್ರಾಂಶ ಅಳವಡಿಸಲಾಗುತ್ತಿದೆ. ಇದರಿಂದ ಸಾಲ ವಿತರಣೆ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ. 25 ಲಕ್ಷ ಹಾಲು ಒಕ್ಕೂಟಗಳಿದ್ದು, ಪ್ರತಿ ಗ್ರಾಮಕ್ಕೊಂದು ಹಾಲು ಒಕ್ಕೂಟ ಸ್ಥಾಪನೆ ಮಾಡಬೇಂಬ ಉದ್ದೇಶವನ್ನು ಅಮಿತ್ ಶಾ ಅವರು ಹೊಂದಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು
ಕೊಡಗು (ಜ.25): ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪದ ತಂತ್ರಾಂಶ ಅಳವಡಿಸಲಾಗುತ್ತಿದೆ. ಇದರಿಂದ ಸಾಲ ವಿತರಣೆ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ. 25 ಲಕ್ಷ ಹಾಲು ಒಕ್ಕೂಟಗಳಿದ್ದು, ಪ್ರತಿ ಗ್ರಾಮಕ್ಕೊಂದು ಹಾಲು ಒಕ್ಕೂಟ ಸ್ಥಾಪನೆ ಮಾಡಬೇಂಬ ಉದ್ದೇಶವನ್ನು ಅಮಿತ್ ಶಾ ಅವರು ಹೊಂದಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಹಾತೂರು ಪ್ರಾಥಮಿಕ ಕೃಷಿ ಪತ್ತಿನ ನೂತನ ಸಹಕಾರ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡ ಹಾಗೂ ಪೊನ್ನಪ್ಪಸಂತೆಯಲ್ಲಿ ಬಾಳೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕಮಾದರಿ ಬೈಲಾ ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಕೇಂದ್ರ ಸರ್ಕಾರದಿಂದ ಪ್ರತಿ ಬಂದಿದ್ದು ಅಧಿಕಾರಿಗಳು ಅದರ ಅಧ್ಯಯನದಲ್ಲಿ ತೊಡಗಿದ್ದಾರೆ. ಅತಿ ಶೀಘ್ರದಲ್ಲಿ ಅದನ್ನು ಸಹಕಾರ ಸಂಘಗಳಿಗೆ ಕಳುಹಿಸಿ ಕೊಡಲಾಗುವುದು ಎಂದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ವ್ಯವಹಾರ ಕ್ಷೇತ್ರ ವಿಸ್ತರಿಸಿಕೊಳ್ಳಲು ಅನುಕೂಲವಾಗುವಂತೆ ನಿಬಂಧನೆಗಳನ್ನು ತಿದ್ದುಪಡಿ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ. ಇದರಿಂದ ಪೆಟ್ರೋಲಿಯಂ ಉತ್ಪನ್ನ ಮಾರಾಟ, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅನುಕೂಲವಾಗಲಿದೆಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಿರುವಾಗಲೇ ಕುಸಿಯುತ್ತಿದ್ದ ತಡೆಗೋಡೆ ತೆರವು!
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡಿ ಅವುಗಳನ್ನು ಆರ್ಥಿಕವಾಗಿ ಶಕ್ತಿಯುತವಾಗಿ ಮಾಡುವುದು ಮತ್ತು ಸಂಘದ ಮುಖಾಂತರ ಗ್ರಾಮೀಣ ಜನತೆಯ ಸಮಸ್ಯೆ ಬಗೆಹರಿಸುವ ಆಶಯವನ್ನು ಕೇಂದ್ರ ಸಹಕಾರ ಸಚಿವರಾದ ಅಮಿತ್ ಶಾ ಅವರು ಹೊಂದಿದ್ದಾರೆ ಎಂದು ಹೇಳಿದರು. ಯಶಸ್ವಿನ ಯೋಜನೆಯನ್ನು ಮರುಜಾರಿ ಮಾಡಲಾಗಿದ್ದು 33 ಲಕ್ಷ ಸದಸ್ಯರು ನೋಂದಣಿ ಮಾಡಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದ್ದು, 1 ಸಾವಿರ ಆಸ್ಪತ್ರೆಗಳೊಂದಿಗೆ ಒಪ್ಪಂದ ಆಗಿದೆ.
ಜಡ್ಜ್ ಮನೆಯನ್ನೂ ಬಿಡದ ಖದೀಮರು: 60ಕ್ಕೂ ಹೆಚ್ಚು ಬಾರಿ ಕಳ್ಳತನ ಮಾಡಿದ್ದ ಮನೆಗಳ್ಳರು ಅರೆಸ್ಟ್!
ಇದರಿಂದ ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ. ಸ್ವಸಹಾಯ ಗುಂಪುಗಳು ನೂರಕ್ಕೆ ನೂರರಷ್ಟು ಸಾಲ ಮರುಪಾವತಿ ಮಾಡುತ್ತಿವೆ. ಕೊಡಗಿನಲ್ಲಿರುವ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಬಹಳ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು. 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಇದುವರೆಗೂ 16 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.