ಬೆಳಗಾವಿ(ಮಾ.04): ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಈವರೆಗೆ ವಿದೇಶದಿಂದ ಜಿಲ್ಲೆಗೆ ಆಗಮಿಸಿದ 9 ಜನರ ಮೇಲೆ ಆರೋಗ್ಯ ಇಲಾಖೆ ತೀವ್ರ ನಿಗಾ ಇಟ್ಟಿದೆ. ಚೀನಾ, ಮಲೇಷ್ಯಾ, ಶ್ರೀಲಂಕಾ ಸೇರಿದಂತೆ ಮತ್ತಿತರ ದೇಶಗಳಿಂದ ಬೆಳಗಾವಿಗೆ 9 ಜನರು ಆಗಮಿಸಿದ್ದು, ಅದರಲ್ಲಿ ಮೂವರು ವಿದ್ಯಾರ್ಥಿಗಳು, ಮೂವರು ಯೋಧರು ಇದ್ದಾರೆ. ದೆಹಲಿ, ಚೆನ್ನೈ, ಬೆಂಗಳೂರು ಮತ್ತಿತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಈ ಪ್ರಯಾಣಿಕರನ್ನು ಸ್ಕ್ರಿನಿಂಗ್ ಟೆಸ್ಟ್ ಮಾಡಿದ ವೇಳೆ ನೆಗೆಟಿವ್ ಫಲಿತಾಂಶ ಬಂದಿದೆ. 

ಆದಾಗ್ಯೂ, ಈ 9 ಮಂದಿಯ ಮೇಲೆ ತೀವ್ರ ನಿಗಾ ಇಟ್ಟಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ನಿರ್ಗಮಿಸುವ, ಆಗಮಿಸುವ ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಗತ್ಯ ಬಿದ್ದಲ್ಲಿ ಮಾಸ್ಕ್‌ಗಳನ್ನು ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಮಾನ ನಿಲ್ದಾಣದಲ್ಲಿ ಕಳೆದ ಒಂದೂವರೆ ತಿಂಗಳಿಂದ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುತ್ತಿದೆ. ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತರು ಕೂಡ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. 

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಿರ್ಲಕ್ಷ್ಯ: 

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾತ್ರ ಹಮ್ಮಿಕೊಂಡಿದೆ. ಆದರೆ, ಸಾಂಬ್ರಾ ವಿಮಾನ ನಿಲ್ದಾಣದ ಸಿಬ್ಬಂದಿ ಮಾತ್ರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ನಿತ್ಯ ಸಾವಿರಾರು ಜನರು ವಿಮಾನದ ಮೂಲಕ ಹೈದ್ರಾಬಾದ್, ಚೆನ್ನೈ, ಮುಂಬಯಿ, ಇಂದೋರ್, ಬೆಂಗಳೂರು ಸೇರಿದಂತೆ ಮತ್ತಿತರ ನಗರಗಳಿಗೆ ಪ್ರಯಾಣ ಬೆಳೆಸುತ್ತಾರೆ. ಆದರೆ, ಜಿಲ್ಲಾಡಳಿತವಾಗಲಿ, ಸಾಂಬ್ರಾ ವಿಮಾನ ನಿಲ್ದಾಣದ ಅಧಿಕಾರಿಗಳಾಗಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಯಾವುದೇ ಪ್ರಯಾಣಿಕರನ್ನು ಇಲ್ಲಿ ತಪಾಸಣೆಗೆ ಒಳ ಪಡಿಸುತ್ತಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. 

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಹಾಗೂ ವಿಮಾನ ನಿಲ್ದಾಣ ಸಿಬ್ಬಂದಿ ವಿರುದ್ಧ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿರುವ ಅವರು, ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ವಿಶೇಷವಾಗಿ ಗಮನ ಹರಿಸಬೇಕು. ಆದರೆ, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಕೂಡಲೇ ಈ ವಿಮಾನ ನಿಲ್ದಾಣದಲ್ಲಿ ವಿಶೇಷ ತಂಡ ರಚಿಸಬೇಕು. ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. 

ಗೃಹಬಂಧನ ಇಲ್ಲ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿದೇಶದಿಂದ ಬಂದ 9 ಮಂದಿಯ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರಿಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ ಹೊರತು ಗೃಹಬಂಧನದಲ್ಲಿ ಇರಿಸಿಲ್ಲ. ಅವರೆಲ್ಲರ ಆರೋಗ್ಯ ಕೂಡ ಚೆನ್ನಾಗಿದೆ. ಅನಗತ್ಯ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ವಿ.ಮುನ್ಯಾಳ  ತಿಳಿಸಿದ್ದಾರೆ. 

ಯಲ್ಲಮ್ಮ ಗುಡ್ಡದಲ್ಲೂ ಸೂಕ್ತ ಕ್ರಮ 

ಕೊರೋನಾ ಪ್ರಕರಣ ಕಟ್ಟೆಚ್ಚರ ಹಿನ್ನೆಲೆ ಸುಕ್ಷೇತ್ರ ಯಲ್ಲಮ್ಮ ಗುಡ್ಡದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಳೆದ ಭಾರತ ಹುಣ್ಣಿಮೆ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಕ್ರೋಡಿಕರಣವಾದ ತ್ಯಾಜ್ಯಗಳನ್ನು ಹೊರ ಹಾಕಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ನೊಣಗಳ ಹಾವಳಿ ನಿಯಂತ್ರಿಸಲು ಕ್ರಿಮಿನಾಶಕ ಸಿಂಪಡಿಸ ಲಾಗುತ್ತಿದೆ. ಕುಡಿಯುವ ನೀರಿನ ಸ್ವಚ್ಛತೆ ಕಡೆಗೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ದೇವ ಸ್ಥಾನ ಸಹಾಯಕ ಕಾರ್ಯನಿರ್ಹನಾಧಿಕಾರಿ ಬಸವರಾಜ ಜೀರಗಾಳ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಪತ್ತೆ ಇಲ್ಲ: ಡಿಸಿ ಬೆಳಗಾವಿ: 

ಜಿಲ್ಲೆಯಲ್ಲಿ 9 ಮಂದಿಗೆ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೆಲವು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯ ಮಗಳಲ್ಲಿ ಸುದ್ದಿಯನ್ನು ಬಿತ್ತರಿಸಲಾಗುತ್ತಿದೆ. ಈ ಸುದ್ದಿಯು ಸತ್ಯಕ್ಕೆ ದೂರವಾಗಿದೆ. ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. 

ಈ ಕುರಿತು ಮಂಗಳವಾರ ಪ್ರಕಟಣೆ ನೀಡಿರುವ ಅವರು, ಕೊರೋನಾ ಪತ್ತೆಯಾಗಿರುವ ಚೀನಾ ಹಾಗೂ ಇತರೆ ದೇಶಗಳಿಂದ ಈವರೆಗೆ ಬೆಳಗಾವಿ ಜಿಲ್ಲೆಗೆ ಒಟ್ಟು 9 ಮಂದಿ ಮರಳಿ ಬಂದಿದ್ದು, ವೈದ್ಯಕೀಯ ತಪಾಸಣೆ ಮಾಡಲಾಗಿದೆ. ಇವರಲ್ಲಿ ಕೊರೋನಾ ರೋಗಲಕ್ಷಣಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. 

ಇವರಲ್ಲಿ ಇಬ್ಬರನ್ನು ಈಗಾಗಲೇ 28 ದಿನ ಗಳವರೆಗೆ ನಿರಂತರವಾಗಿ ಅನುಸರಣೆ ಮಾಡಲಾಗಿದೆ. ಉಳಿದ 7 ಮಂದಿಯನ್ನು ಮುಂದಿನ 28 ದಿನಗಳವರೆಗೆ ಅನುಸರಣೆ ಮಾಡಲಾಗುವುದು. ಯಾರನ್ನು ಗೃಹ ಬಂಧನದಲ್ಲಿ ಇರಿಸಲಾಗಿಲ್ಲ. ಇವರಿಗೆ ತಮ್ಮ ಮನೆಯಲ್ಲಿಯೇ ವೈಯಕ್ತಿಕ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸು ವಂತೆ ತಿಳಿಸಲಾಗಿದೆ. ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಅವರ ಬಗ್ಗೆ ತೀವ್ರ ನಿಗಾ ಇಟ್ಟಿದ್ದಾರೆ. ಅಲ್ಲದೆ, ನಿತ್ಯವೂ ಅವರ ಆರೋಗ್ಯವನ್ನು ಪರಿಶೀಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾ ಪೀಡಿತ ರಾಷ್ಟ್ರಗಳಿಂದ ಬರಬಹುದಾದ ಪ್ರವಾಸಿಗರ, ಬೆಳಗಾವಿ ಜಿಲ್ಲೆಯ ನಿವಾಸಿಗಳ ವಿವರ ರಾಜ್ಯ ಕಣ್ಗಾವಲು ಘಟಕದಿಂದ ಪ್ರತಿ ನಿತ್ಯ ಇ-ಮೇಲ್ ಮುಖಾಂತರ ಜಿಲ್ಲಾ ಸಮೀಕ್ಷಾ ಘಟಕಕ್ಕೆ ಬರುತ್ತಿ ದೆ. ಈ ಎಲ್ಲಾ ಸಾರ್ವಜನಿಕ, ಪ್ರವಾಸಿಗರನ್ನು ತುರ್ತಾಗಿ ಸಂಪರ್ಕಿಸಿ ಕೂಡಲೇ ಅವಶ್ಯಕ ಕ್ರಮಗಳನ್ನು ಜರುಗಿಸಲಾಗುವುದು ಅವರು ತಿಳಿಸಿದ್ದಾರೆ. 

ಜಿಲ್ಲೆಗೆ ಬಂದ ಪ್ರವಾಸಿಗರ ವಿವರಗಳ ಬಗ್ಗೆ ರಾಜ್ಯ ಕಣ್ಗಾವಲು ಘಟಕಕ್ಕೆ ಕಳುಹಿಸಿಕೊಡಲಾಗುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಜನವರಿ 28 ರಂದು ಈ ಕುರಿತು ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾರ್ಗಸೂಚಿಯನ್ನು ನೀಡಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಕಂಡು ಅವರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ, ಬೆಳಗಾವಿಯಲ್ಲಿ ಪ್ರತ್ಯೇಕ ಐಸೊಲೇಶನ್ ವಾರ್ಡ್‌ನ ವ್ಯವಸ್ಥೆ ಮಾಡಲಾಗಿರುತ್ತದೆ. ಕೊರೋನಾ ವೈರಸ್ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಇಲಾಖೆಯು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ