ಬೆಂಗಳೂರು [ಅ.05]: ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆ ಜತೆಗೆ ಅ.1ರಂದು 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಲು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಮತ್ತು ಬಿಬಿಎಂಪಿ ಕೌನ್ಸಿಲ್‌ ಕಾರ್ಯದರ್ಶಿ ಸೆ.23ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ತೆರಿಗೆ ಹಾಗೂ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಎಸ್‌.ಪಿ.ಹೇಮಲತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ಈ ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕ ಸದಸ್ಯ ರಜಾಕಾಲದ ನ್ಯಾಯಪೀಠ ಈ ಆದೇಶ ಮಾಡಿತು. ಜತೆಗೆ, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್‌ ನೀಡಿತು. ಬಿಬಿಎಂಪಿ ಆಯುಕ್ತರು ಮತ್ತು ಕೌನ್ಸಿಲ್‌ ಕಾರ್ಯದರ್ಶಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಕರ್ನಾಟಕ ಮುನ್ಸಿಪಲ್‌ ಕಾರ್ಪೋರೇಷನ್‌ ಕಾಯ್ದೆಯ ಸೆಕ್ಷನ್‌ 11(5) ಅನ್ವಯ ಸ್ಥಾಯಿ ಸಮಿತಿ ಅಧ್ಯಕ್ಷರ ಅವಧಿ ಒಂದು ವರ್ಷ. ಬಿಬಿಎಂಪಿ 12 ಸ್ಥಾಯಿ ಸಮಿತಿಗಳಿಗೆ 2018ರ ಡಿ.5ರಂದು ಚುನಾವಣೆ ನಡೆದಿದೆ. ನಿಯಮ ಪ್ರಕಾರ 2019ರ ಡಿ.4ಕ್ಕೆ ಮತ್ತೆ ಚುನಾವಣೆ ನಡೆಯಬೇಕಿದೆ. ಆದರೆ, ಬಿಬಿಎಂಪಿ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯ ಜತೆಗೆ 12 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ಅ.1ರಂದೇ ನಡೆಸಲು ನಿರ್ಧರಿಸಿ ಸರ್ಕಾರ ಹಾಗೂ ಬಿಬಿಎಂಪಿ ಸೆ.23ರಂದು ಅಧಿಸೂಚನೆ ಹೊರಡಿಸಿವೆ. ಆ ಮೂಲಕ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರಾವಧಿಯನ್ನು ಮೊಟಕುಗೊಳಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಲ್ಲದೆ, ಸ್ಥಾಯಿ ಸಮಿತಿಗಳ ಚುನಾಯಿತ ಸದಸ್ಯರ ಅಧಿಕಾರಾವಧಿ ಮೊಟಕುಗೊಳಿಸುವುದು ಸರಿಯಲ್ಲ. ಆ ಕ್ರಮ ಕಾನೂನು ಬಾಹಿರವಾಗಿದ್ದು, ಚುನಾವಣಾ ಅಧಿಸೂಚನೆಯನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥದವರೆಗೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಸೇರಿ ವಿವಿಧ 8 ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸೆ.27ರಂದು ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.