ಆರೋಗ್ಯ ಸೌಲಭ್ಯ ಒದಗಿಸುವುದು ನಮ್ಮ ಕರ್ತವ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ
ಸರ್ಕಾರಿ ಆಸ್ಪತ್ರೆಗಳನ್ನು ಸಾರ್ವಜನಿಕ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದು, ಬಡರೋಗಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿದು ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರಗ ಜ್ಞಾನೇಂದ್ರ ಹೇಳಿದರು.
ತುಮಕೂರು (ನ.10): ಸರ್ಕಾರಿ ಆಸ್ಪತ್ರೆಗಳನ್ನು ಸಾರ್ವಜನಿಕ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದು, ಬಡರೋಗಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿದು ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳೂ ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪರಿಶೀಲನೆ ಸಭೆ ನಡೆಸಿ, ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಇರಬಹುದಾದ ಕುಂದು ಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ದೂರುಗಳು ಬಂದಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ಲೋಪಗಳು ಉಂಟಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆ್ಯಂಬುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಮುಂತಾದವುಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಆರೋಗ್ಯ ಸೇವೆ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಔಷಧಿಗಾಗಿ ಪರದಾಡುವ ಪರಿಸ್ಥಿತಿ ಬರಬಾರದು. ಸರ್ಕಾರಿ ಆಸ್ಪತ್ರೆಯಲ್ಲಿರುವ ಮಾತ್ರೆ, ಔಷಧಗಳನ್ನು ವೈದ್ಯರು, ರೋಗಿಗಳಿಗೆ ವಿತರಿಸಬೇಕು.
Tumakuru: ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ: ಎಚ್ಡಿಕೆ ವಿಶ್ವಾಸ
ಮಾತ್ರೆ, ಔಷಧಗಳು ದಾಸ್ತಾನಿದ್ದರೂ ಹೊರಗಿನ ಮೆಡಿಕಲ್ ಸ್ಟೋರ್‌ಗಳಿಗೆ ಬರೆದುಕೊಟ್ಟರೆ ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಹಲವು ವೈದ್ಯರೂ ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಹಗಲು ರಾತ್ರಿಯೆನ್ನದೆ ಸಮರ್ಪಣ ಮನೋಭಾವನೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ, ಅದರಿಂದಾಗಿಯೇ, ಸರ್ಕಾರಿ ಆಸ್ಪತ್ರೆ ಬಗ್ಗೆ ಜನರು ನಂಬಿಕೆ ಉಳಿಸಿಕೊಂಡು ಬರುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೌಕರ್ಯಗಳು ಹಾಗೂ ತಜ್ಞ ವ್ಯೆದ್ಯರಿದ್ದಾರೆ. ಅವುಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು.
ಒಳ್ಳೆಯ ಸೇವೆ ನೀಡುವುದು ವೈದ್ಯರ ಕರ್ತವ್ಯ. ನಮಗೆ ವೇತನವು ಸಿಗುವುದು ಜನರ ತೆರಿಗೆಯ ಹಣ ಎಂಬುದು ನೆನಪಿಟ್ಟುಕೊಳ್ಳಬೇಕು ಎಂದರು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ಸೇರಿದಂತೆ ಹಿರಿಯ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.
ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ 10 ಸ್ಥಾನ ಗೆಲ್ಲಲಿದೆ: ಎಚ್.ಡಿ.ಕುಮಾರಸ್ವಾಮಿ
ತುರ್ತು ಪರಿಸ್ಥಿತಿಯಲ್ಲಿ ದಾಖಲೆ ಮುಖ್ಯವಲ್ಲ: ಇತ್ತೀಚೆಗೆ ಹೆರಿಗೆ ಸಲುವಾಗಿ ಆಸ್ಪತ್ರೆಗೆ ಬಂದು, ಸೇವೆ ಸಿಗದೆ, ಮರಣ ಹೊಂದಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಚಿವರು, ಇನ್ನು ಮುಂದೆ, ಇಂಥಹ ಅಮಾನವೀಯ ಘಟನೆಗಳು ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ವೈದ್ಯರು ಮತ್ತು ಸಿಬ್ಬಂದಿ ಸಾರ್ವಜನಿಕರ ಸೇವೆಗೆ ಸದಾ ಲಭ್ಯವಿದ್ದು, ಆಸ್ಪತ್ರೆಯ ಶುಚಿತ್ವ ಮತ್ತು ರೋಗಿಗಳ ಸಮಗ್ರ ಆರೈಕೆಗೆ ಗಮನ ನೀಡಿ, ಶಿಸ್ತು, ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆರಗ ಜ್ಞಾನೇಂದ್ರ ತಿಳಿಸಿದರು.