BJP News: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆ, ಜನಪರ ಯೋಜನೆಗಳು ಹಾಗೂ ದೇಶದ ಅಭಿವೃದ್ಧಿ ಕುರಿತು ಸಂಸದ ಜಗದೀಶ ಶೆಟ್ಟರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ (ಜೂ.14): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷದಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ದೇಶದ ಕೋಟ್ಯಾಂತರ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಮಾತ್ರವಲ್ಲದೇ, ದೇಶದ ಸರ್ವತೋಮುಖ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದೆ ಎಂದು ಸಂಸದ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು 4,399ಕ್ಕೂ ಅಧಿಕ ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ದೇಶದ ಇತಿಹಾಸದಲ್ಲೇ ದೀರ್ಘಾವಧಿ ಆಡಳಿತ ನಡೆಸಿದ ನಾಯಕರಲ್ಲಿ ಒಬ್ಬರಾಗಿದ್ದಾರೆ. ಈ ಮೂಲಕ ಈ ಹಿಂದೆ ಜವಾಹರಲಾಲ್ ನೆಹರು ಹೊಂದಿದ್ದ ದಾಖಲೆಯನ್ನು ಮುರಿದಿದ್ದಾರೆ. ಉತ್ತಮ ಹಾಗೂ ದಕ್ಷ ಆಡಳಿತ ಮತ್ತು ಜನಪರ ನೀತಿಗಳೇ ಈ ನಿರಂತರ ಯಶಸ್ಸಿಗೆ ಕಾರಣವಾಗಿದ್ದು, 2014ರಿಂದ ನಡೆದ ಪ್ರತಿಯೊಂದು ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಶುದ್ಧ ಕುಡಿಯುವ ನೀರು ತಲುಪಿಸುವಲ್ಲಿ ದೊಡ್ಡ ಸಾಧನೆ ಆಗಿದ್ದು, ಕರ್ನಾಟಕದಲ್ಲಿ 87 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಮನೆಗಳಿಗೆ ನೀರು ಒದಗಿಸಲಾಗಿದೆ. ಜನದನ್‌ ಯೋಜನೆಯಡಿ ರಾಜ್ಯದ 2.12 ಕೋಟಿ ಜನತೆಯನ್ನು ಬ್ಯಾಂಕಿಂಗ್‌ ಕ್ಷೇತ್ರಕ್ಕೆ ತರಲಾಗಿದೆ. ಅದಲ್ಲದೇ, ಪಿಎಂ ಕಿಸಾನ್‌, ಮುದ್ರಾ ಯೋಜನೆಯಡಿ ಲಕ್ಷಾಂತರ ಜನರಿಗೆ ಯೋಜನೆಗಳ ಸೌಲಭ್ಯಗಳನ್ನು ಒದಗಿಸಿ, ಅಭಿವೃದ್ಧಿ ಜೊತೆಗೆ ಹೊಸ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವಿಶ್ವ ನಾಯಕರೊಂದಿಗೆ ಉತ್ತಮ ಸಂಬಂಧ ಬೆಳೆಸಿ ಭಾರತದ ಗೌರವ ತಂದು ಕೊಟ್ಟಿದ್ದಾರೆ ಎಂದು ವಿವರಿಸಿದರು.

ಬೆಳಗಾವಿಯಲ್ಲಿ ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ವಿಮಾನಗಳ ಸಂಖ್ಯೆ ಕಡಿತಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಪರ್ಕ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೂ ಪ್ರಯತ್ನಿಸಲಾಗುತ್ತಿದೆ. ರಾಜ್ಯ ಸರ್ಕಾರವು ರೈಲ್ವೆ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಸೂಕ್ತ ಅನುದಾನ ನೀಡದಿರುವುದು ಕೆಲವೆಡೆ ಕುಂಠಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದ ಅವಿಭಾಜ್ಯ ಅಂಗ

ಮರಾಠಿ ಭಾಷಿಕರ ಮತಗಳ ಓಲೈಕೆಗಾಗಿ ಬೆಜೆಪಿಯು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಪರ ನಿರ್ಣಯ ಅಂಗೀಕರಿಸಲು ನಿರಾಕರಿಸುತ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ ಶೆಟ್ಟರ್‌, ಬೆಳಗಾವಿ ನಗರ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಮರಾಠಿ ಭಾಷಿಕರೇನು ಪಾಕಿಸ್ತಾನದವರಲ್ಲ, ಕನ್ನಡ ಹಾಗೂ ಮರಾಠಿ ಭಾಷಿಕರು ಇಲ್ಲಿ ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದಲೇ ಅಭಿವೃದ್ಧಿ ಸಾಧಿಸಬೇಕು. ಕನ್ನಡಪರ ಸಂಘಟನೆಗಳು ಆಗ್ರಹಿಸುತ್ತಿರುವಂತೆ ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳೆಲ್ಲರೂ ಸೇರಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು.