ಅಭಿವೃದ್ಧಿಗೆ ಮೀಸಲಾದ ಹಣ ದುರುಪಯೋಗ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾಗಿರುವ ವಿಚಾರ ಮುಂದಿಟ್ಟುಕೊಂಡು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗಂಗಾವತಿ (ಆ.15): ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾದ ಹಣ ದುರುಪಯೋಗ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾಗಿರುವ ವಿಚಾರ ಮುಂದಿಟ್ಟುಕೊಂಡು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಚಿವರಾದ ನಾಗೇಂದ್ರ ಮತ್ತು ಜಮೀರ್ ಅಹ್ಮದ್ ಅವರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಸರ್ಕಾರಕ್ಕೆ ಧಕ್ಕೆಯಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗಂಗಾವತಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜನಾರ್ದನ ರೆಡ್ಡಿ, ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ವಿರುದ್ಧದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗ ಪ್ರಕರಣವನ್ನು ಪ್ರಸ್ತಾಪಿಸಿದರು.

‘ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಅವಕಾಶ ನೀಡುತ್ತಿದೆ’

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಹಣದ ಅವ್ಯವಹಾರ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದನ್ನು ಪ್ರಶ್ನಿಸಿದ ಜನಾರ್ದನ ರೆಡ್ಡಿ, ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಸರ್ಕಾರ ಅವಕಾಶ ನೀಡುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು. ಮತ್ತೊಂದೆಡೆ, ವಿಜಯನಗರ ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಲು ಸಚಿವ ಜಮೀರ್ ಅಹ್ಮದ್ ನಿರಾಕರಿಸಿರುವ ವಿಚಾರವನ್ನೂ ಅವರು ಪ್ರಸ್ತಾಪಿಸಿದರು. ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರೂ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಜಮೀರ್ ಲಿಖಿತವಾಗಿ ತಿಳಿಸಿದ್ದಾರೆ ಎಂದು ಆರೋಪಿಸಿದ ಜನಾರ್ದನ ರೆಡ್ಡಿ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ ಸರ್ಕಾರಕ್ಕೆ ಧಕ್ಕೆಯಾಗುವುದು ಖಚಿತ’ ಎಂದು ಅವರು ಎಚ್ಚರಿಕೆ ನೀಡಿದರು.

‘ಸ್ವಾತಂತ್ರ್ಯ ಕೇವಲ ಒಂದು ದಿನದ ಆಚರಣೆಯಲ್ಲ’

ಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿವರಿಸಿದ ಜನಾರ್ದನ ರೆಡ್ಡಿ, ಸ್ವಾತಂತ್ರ್ಯವೆಂದರೆ ಕೇವಲ ಒಂದು ದಿನದ ಆಚರಣೆಯಲ್ಲ ಎಂದು ಹೇಳಿದರು. ದೇಶದ ಏಕತೆ, ಸಾರ್ವಭೌಮತೆ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವ ಸಂಕಲ್ಪ ಮಾಡಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ಅಭಿವೃದ್ಧಿ ಹೊಂದಿದ ಹಾಗೂ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

‘ಬಳ್ಳಾರಿ ಮಾದರಿಯಲ್ಲಿ ಗಂಗಾವತಿ ಅಭಿವೃದ್ಧಿ’

ಇದೇ ವೇಳೆ ಗಂಗಾವತಿ ನಗರದ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಜನಾರ್ದನ ರೆಡ್ಡಿ ಮಾಹಿತಿ ನೀಡಿದರು. ಬಳ್ಳಾರಿ ಮಾದರಿಯಲ್ಲಿ ಗಂಗಾವತಿಯನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು. ಅಮೃತ್ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹೊಸ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ನವೀಕರಣ ಸೇರಿದಂತೆ ಹಲವು ಯೋಜನೆಗಳಿಗೆ ಒತ್ತು ನೀಡಲಾಗುತ್ತಿದೆ ಎಂದರು. ಅಲ್ಲದೆ, ಸುಮಾರು ₹260 ಕೋಟಿ ವೆಚ್ಚದಲ್ಲಿ 27 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು. ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗೊಂದಿಯನ್ನು ₹10 ಕೋಟಿ ವೆಚ್ಚದಲ್ಲಿ ಪಾರಂಪರಿಕ ಗ್ರಾಮವಾಗಿ ಅಭಿವೃದ್ಧಿಪಡಿಸುವ ಯೋಜನೆ ಇದೆ ಎಂದು ಜನಾರ್ದನ ರೆಡ್ಡಿ ಹೇಳಿದರು.