ವಿಜಯಪುರ, [ಜೂ.16]: ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಸವಾರಜ್ ಹೊರಟ್ಟಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ವಿಜಯಪುರದಲ್ಲಿಂದು ಮಾತನಾಡಿದ ಹೊರಟ್ಟಿ,  ಪ್ರತಿಯೊಂದು ಕ್ಷೇತ್ರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಡುವ ಪದ್ಧತಿ ಬಿಟ್ಟಿದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕಕ್ಕೆ ಕೆಲವು ಕಚೇರಿ ಸೀಫ್ಟ್ ಮಾಡ್ತೇನಿ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದರು. ಆದರೆ, ಉತ್ತರ ಕರ್ನಾಟಕಕ್ಕೆ ಒಂದು ಕಚೇರಿ ಬಂದಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಿಮಗೆ ಕರ್ನಾಟಕ ಅಂದ್ರೆ ಕೇವಲ ಬೆಂಗಳೂರು ಹಾಗೂ ಮೈಸೂರು ಅಲ್ಲ. ಉತ್ತರ ಕರ್ನಾಟಕದ ಕಡೆ ಗಮನಹರಿಸಬೇಕೆಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿವಿದರು.

ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಮೈತ್ರಿ ನಾಯಕರ ವಿರುದ್ಧ ಕತ್ತಿ ಮಸೆಯುತ್ತಿರುವ ಹೊರಟ್ಟಿ, ಅವಕಾಶ ಸಿಕ್ಕಾಗೆಲ್ಲ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ.