ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿದೆ. ಕಲ್ಲು ತೂರಾಟದ ಆರೋಪದಿಂದ ಆರಂಭವಾದ ಗಲಾಟೆಯಲ್ಲಿ ಹಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕಲಬುರಗಿ (ಫೆ.21): ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೆರವಣಿಗೆ ವೇಳೆ ಕಲ್ಲು ತೂರಾಟದ ಆರೋಪ

ರಾವೂರು ಗ್ರಾಮದಲ್ಲಿ ಹಿಂದೂ ಯುವಕರು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಿದ್ದಾಗ, ಸ್ಥಳೀಯ ನಿವಾಸಿ ಮಹಮ್ಮದ್ ರಫೀಕ್ ಎಂಬುವವರ ಮನೆಯ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಣ್ಣ ಕಿಡಿ ಎರಡು ಗುಂಪುಗಳ ನಡುವೆ ದೊಡ್ಡ ಮಟ್ಟದ ಗಲಾಟೆಗೆ ಕಾರಣವಾಗಿದೆ.

ರಾಡು, ಕಟ್ಟಿಗೆಗಳಿಂದ ಹಲ್ಲೆ: ಮೂವರಿಗೆ ಗಂಭೀರ ಗಾಯ

ಮನೆಯ ಮೇಲೆ ಕಲ್ಲು ಎಸೆದಿದ್ದನ್ನು ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಉದ್ರಿಕ್ತ ಗುಂಪು ರಾಡು ಮತ್ತು ಕಟ್ಟಿಗೆಗಳಿಂದ ಹಲ್ಲೆ ನಡೆಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮೂರರಿಂದ ನಾಲ್ಕು ಜನ ಮುಸ್ಲಿಂ ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಈ ಘಟನೆಯು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಎರಡೂ ಗುಂಪುಗಳಿಂದ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ. 

YouTube video player