ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಂದಾಪುರ (ಮಾ.27): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಮಾತನಾಡಿದ ಅವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.

ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ವಾರಾಹಿ ಯೋಜನೆ: ಯಾರಿಗೂ ಅನ್ಯಾಯ ಆಗಲು ಬಿಡಲ್ಲ

ವಾರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕಕರ್‌ ತಿಳಿಸಿದರು. ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇನ್ನು ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಸರ್ಕಾರಿ ಬಸ್‌ಗಳ ಪ್ರವೇಶಕ್ಕೆ ರಸ್ತೆ ತೊಡಕಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಎಸ್‌ಪಿ ಹರಿರಾಮ್ ಶಂಕರ್, ಸಿಇಓ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ಉದ್ಯಮಿ ಬೈಲೂರು ಉದಯ್ ಕುಮಾರ್ ಶೆಟ್ಟಿ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಇನ್ಸ್‌ಪೆಕ್ಟರ್ ಜಯರಾಮ್ ಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಪ್ರಮುಖರಾದ ಸಂಪಿಗೇಡಿ ಸಂಜೀವ ಶೆಟ್ಟಿ, ರಮೇಶ್ ಕಾಂಚನ್, ಸಂತೋಷ ಶೆಟ್ಟಿ ಬಲಾಡಿ, ಶೇಖರ ಪೂಜಾರಿ, ಯುವ ಕಾಂಗ್ರೆಸ್ ನ ಸಂಜಯ್ ಆಚಾರ್ಯ ಇದ್ದರು.