Farmers protest in Bengaluru: ಕೃಷಿ ಬಿಕ್ಕಟ್ಟು ಹಾಗೂ ರೈತರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿ ನ.30ರಂದು ಬೆಂಗಳೂರಿನಲ್ಲಿ ಭಾರತೀಯ ಕಿಸಾನ್ ಸಂಘ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಸಾಲ ಮನ್ನಾ, ವಿದ್ಯುತ್ ಪೂರೈಕೆ, ಹಾಲಿನ ದರ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಹಾಸನ (ನ.27): ಕೃಷಿ ಕ್ಷೇತ್ರ ಎದುರಿಸುತ್ತಿರುವ ಬಿಕ್ಕಟ್ಟು ಹಾಗೂ ರೈತರ ಸಂಕಷ್ಟಗಳಿಗೆ ಸರ್ಕಾರಗಳು ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ(Bharateeya kisan sangha)ದ ವತಿಯಿಂದ ನವೆಂಬರ್‌ 30ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ(Freedom Park Bengaluru)ದಲ್ಲಿ ರಾಜ್ಯಮಟ್ಟದ ಬೃಹತ್ ರೈತಾಕ್ರೋಶ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮಲ್ಲಪ್ಪ ಮತ್ತು ಉಪಾಧ್ಯಕ್ಷ ಸಣ್ಣೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, 1979ರಿಂದ ಸ್ವದೇಶಿ, ಸ್ವಾವಲಂಬನೆ ಮತ್ತು ಸಾವಯವ ಕೃಷಿಯ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಿಸಾನ್ ಸಂಘವು ರೈತರ ಹಿತಾಸಕ್ತಿಗಾಗಿ ನಿರಂತರ ಹೋರಾಟ ನಡೆಸುತ್ತಿದೆ. ರೈತರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಗ್ರಾಮೀಣ ಆರ್ಥಿಕತೆ ಬಲಗೊಳ್ಳಲು ಹಾಗೂ ಸಮರ್ಥ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಕೃಷಿಗಾಗಿ ಒಂದು ಲಕ್ಷ ಕೋಟಿ ರೂ. ವೆಚ್ಚ ಮಾಡುವುದಾಗಿ ಹಾಗೂ 30 ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಯೋಜನೆಗಳು ಅನುಷ್ಠಾನಗೊಂಡಿಲ್ಲ. ರೈತರು ಸಾಲದ ಹೊರೆ, ಬೆಳೆ ನಷ್ಟ, ವಿದ್ಯುತ್ ಅಭಾವ ಮತ್ತು ಕೃಷಿ ಉತ್ಪನ್ನಗಳ ಬೆಲೆ ಕುಸಿತದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಹಾಲಿನ ಖರೀದಿ ದರವನ್ನು ಲೀಟರ್‌ಗೆ 60 ರೂ. ಹಾಗೂ 10 ರು. ಪ್ರೋತ್ಸಾಹಧನ ಸೇರಿ ಒಟ್ಟು 70 ರು. ನಿಗದಿಪಡಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ಗುಣಮಟ್ಟದ ವಿದ್ಯುತ್ ನೀಡಬೇಕು. ರೈತರ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಿ, 10 ಲಕ್ಷ ರು.ವರೆಗೆ ಬಡ್ಡಿರಹಿತ ಬೆಳೆ ಸಾಲ ಒದಗಿಸಬೇಕು. ಕಬ್ಬಿಗೆ ಉತ್ಪಾದನಾ ವೆಚ್ಚ ಆಧರಿಸಿ ಲಾಭದಾಯಕ ಬೆಲೆ ನಿಗದಿಪಡಿಸಿ, ಕಾರ್ಖಾನೆಗಳಿಂದ ಬಾಕಿ ಹಣವನ್ನು ಸಕಾಲದಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿದರು.

ರೈತರ ಭೂ ದಾಖಲೆಗಳಲ್ಲಿನ ಲೋಪ ಸರಿಪಡಿಸಲು ಅಭಿಯಾನ

ರೈತರ ಭೂ ದಾಖಲೆಗಳಲ್ಲಿನ ಲೋಪ ಸರಿಪಡಿಸಲು ವಿಶೇಷ ಅಭಿಯಾನ ನಡೆಸಬೇಕು. ಪಹಣಿ, ಖಾತೆ, ಪೋಡಿ ಹಾಗೂ ಹದ್ದುಬಸ್ತು ಪ್ರಕರಣಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು. ಬೆಳೆ ವಿಮೆ ಪರಿಹಾರವನ್ನು ಎರಡು ತಿಂಗಳೊಳಗೆ ರೈತರ ಖಾತೆಗೆ ಜಮೆ ಮಾಡಬೇಕು. ಪಶ್ಚಿಮ ಘಟ್ಟದ ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ಸ್ಥಳೀಯರ ಅಭಿಪ್ರಾಯಕ್ಕೆ ಆದ್ಯತೆ ನೀಡಬೇಕು ಎಂದರು.

ನೀರಾವರಿ ಯೋಜನೆ ಪೂರ್ಣಗೊಳಿಸಿ

ಬಾಕಿ ಇರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕೆರೆಕಟ್ಟೆ, ಕಾಲುವೆ ಹಾಗೂ ಜಲಾಶಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಎತ್ತಿನಹೊಳೆ, ಮೇಲ್ಭದ್ರಾ ಮತ್ತು ಆಲಮಟ್ಟಿ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ನೀರಾವರಿಗಾಗಿ ವಾರ್ಷಿಕ ಒಂದು ಲಕ್ಷ ಕೋಟಿ ರು. ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕೊಬ್ಬರಿ, ತೆಂಗು, ರಾಗಿ, ಜೋಳ, ತೊಗರಿ, ಮೆಕ್ಕೆಜೋಳ ಹಾಗೂ ಭತ್ತ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಖಾತರಿಪಡಿಸಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಬೆಲೆ ಕುಸಿತ ತಡೆಗೆ ಸ್ಥಿರೀಕರಣ ವ್ಯವಸ್ಥೆ ಜಾರಿಗೊಳಿಸಬೇಕು. ಕರ್ನಾಟಕಕ್ಕೆ 50 ಸಾವಿರ ಕೋಟಿ ರು. ಕೃಷಿ ಆವರ್ತ ನಿಧಿ ಸ್ಥಾಪಿಸಿ, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಕೇಂದ್ರದ 20 ಸಾವಿರ ರು. ಹಾಗೂ ರಾಜ್ಯದ 10 ಸಾವಿರ ರು. ಸೇರಿ ವಾರ್ಷಿಕ 30 ಸಾವಿರ ರು. ನೆರವು ನೀಡಬೇಕು ಎಂದು ಆಗ್ರಹಿಸಿದರು.

ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುವ ಪ್ರತಿಭಟನೆಯಲ್ಲಿ ರೈತರು, ಹೈನುಗಾರರು ಹಾಗೂ ರೈತಪರ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಕೋಶಾಧ್ಯಕ್ಷ ಕುಮಾರಸ್ವಾಮಿ, ವೆಂಕಟೇಗೌಡ, ರೇಣುಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.