ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದ ಶಾಲೆ-ಕಾಲೇಜಿಗೂ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು (ಜು.16): ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಇದರ ಬೆನ್ನಲ್ಲಿಯೇ ಆಯಾ ರಾಜ್ಯದ ಡಿಸಿಗಳು ಅಗತ್ಯಕ್ಕೆ ಅನುಗುಣವಾಗಿ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕೊಡಗು ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದರೆ, ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ.

ಕೊಡಗು ಜಿಲ್ಲೆಗೆ ನಾಳೆ ಬೆಳಿಗ್ಗೆವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ನಾಳೆ ಬೆಳಿಗ್ಗೆ 8.30 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಣೆಯಾಗಿದ್ದು, 150 ಮಿಲಿ ಮೀಟರ್ ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹವಾಮಾನ ಇಲಾಖೆ ಕೂಡ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಇದೇ ಕಾರಣಕ್ಕಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 17ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಇರಲಿದೆ.

ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ: ಉಡುಪಿ ಜಿಲ್ಲೆಯಲ್ಲೂ ವ್ಯಾಪಕ ಮಳೆ ಆಗುತ್ತಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿಕೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಪದವಿ ಪೂರ್ವ, ಪದವಿ ಕಾಲೇಜುಗಳು ತೆರೆದಿರುತ್ತವೆ ಎಂದು ತಿಳಿಸಿದ್ದಾರೆ.