ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 07) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮಿತಿಮೀರಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 07) ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಣೆಯಾಗಿದ್ದರೆ, ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲೂ ಮಳೆ ಅಬ್ಬರಿಸುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1. ಉತ್ತರ ಕನ್ನಡ: ಐದು ತಾಲೂಕುಗಳಲ್ಲಿ ರಜೆ, ರೆಡ್ ಅಲರ್ಟ್ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳಾದ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಮತ್ತು ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

2. ಬೆಳಗಾವಿ: ಶಾಲೆಯೊಂದಿಗೆ ಪಿಯು ಕಾಲೇಜುಗಳಿಗೂ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಮುಖ ಆದೇಶ ನೀಡಿದ್ದಾರೆ. ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

3. ಚಿಕ್ಕಮಗಳೂರು: ಕಳಸ ತಾಲೂಕಿನಲ್ಲಿ ರಜೆ

ಮಲೆನಾಡು ಭಾಗವಾದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕಳಸ ತಾಲೂಕಿನ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗಳಿಗೆ ನಾಳೆ ರಜೆ ಘೋಷಿಸಿ ತಹಸಿಲ್ದಾರ್ ಆದೇಶಿಸಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಭೀತಿ ಇರುವುದರಿಂದ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.

ಸಾರ್ವಜನಿಕರಿಗೆ ಸೂಚನೆ:

ಮಳೆಯ ತೀವ್ರತೆ ಹೆಚ್ಚಿರುವ ಭಾಗಗಳಲ್ಲಿ ಜನರು ಅನಗತ್ಯವಾಗಿ ನದಿ, ಹಳ್ಳ-ಕೊಳ್ಳಗಳು ಮತ್ತು ವಿದ್ಯುತ್ ಕಂಬಗಳ ಹತ್ತಿರ ಹೋಗದಂತೆ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಸೂಚನೆ ನೀಡಿವೆ. ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.