ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಕಾರವಾರ (ಆ.29): ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದ್ದು, ಗಣೇಶ ಚತುರ್ಥಿ ಹಬ್ಬವನ್ನು ಮಳೆಯಲ್ಲಿಯೇ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಾರ ಉತ್ತರ ಕನ್ನಡ ಜಿಲ್ಲೆ ವಿದ್ಯಾರಥಿಗಳು ಗಣೇಶ ಚರ್ತುರ್ಥಿಯ ರಜೆ ಪಡೆದಿದ್ದ ಮರುದಿನವೇ ಮಳೆಯಿಂದಾಗಿ ರಜೆ ಪಡೆದುಕೊಂಡಿದ್ದರು. ಶುಕ್ರವಾರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದರಿಂದ ಶಾಲಾ ಕಾಲೇಜುಗಳು ನಡೆದಿತ್ತು. ಅದರೆ, ಶನಿವಾರ ಭಾರೀ ಮಳೆಯಾಗುವ ಸೂಚನೆ ಇರುವ ಕಾರಣ ಉತ್ತರ ಕನ್ನಡ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಹೊನ್ನಾವರ ತಾಲೂಕಿನ ಶಾಲೆಗಳಿಗೆ ಮಾತ್ರವೇ ರಜೆ

ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳು ಮುಂದುವರಿಯಲಿದೆ. ಆದರೆ, ಮಳೆ ಮತ್ತೆ ವ್ಯಾಪಕವಾದಲ್ಲಿ ಜಿಲ್ಲೆಯ ಇತರ ತಾಲೂಕಿಗಳಿಗೂ ರಜೆ ವಿಸ್ತರಣೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆ ಮುಂದುವರಿದ ಕಾರಣ, ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ ಮತ್ತು ಕಳಸ ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ಒಂದು ದಿನ ರಜೆ ಇರಲಿದೆ. ಅದೇ ರೀತಿ, ಚಿಕ್ಕಮಗಳೂರು ತಾಲ್ಲೂಕಿನ ಕಸಬಾ, ಅಂಬಳೆ, ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ ಮತ್ತು ಜಾಗರ ಹೋಬಳಿಗಳಿಗೂ ರಜೆ ಘೋಷಿಸಲಾಗಿದೆ. ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಮತ್ತು ಲಕ್ಕವಳ್ಳಿ ಹೋಬಳಿ ವ್ಯಾಪ್ತಿಗೂ ರಜೆ ಅನ್ವಯವಾಗುತ್ತದೆ. ಪಶ್ಚಿಮ ಘಟ್ಟ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.