ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕೊಡಗು/ ಹಾಸನ (ಆ.17): ರಾಜ್ಯದಲ್ಲಿ ವಾಯುಭಾರ ಕುಸಿತದಿಂದಾಗಿ ಭಾರೀ ಮಳೆ ಮುನ್ಸೂಚನೆ ನೀಡಿರುವ ಬೆನ್ನಲ್ಲಿಯೇ, ಆರೆಂಜ್ ಅಲರ್ಟ್ ಇರುವ ಕೊಡಗು ಜಿಲ್ಲೆಯಾದ್ಯಂತ ಹಾಗೂ ಹಾಸನ ಜಿಲ್ಲೆಯ 3 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಇರುವ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಶಾಲೆಗಳಿಗೆ ಒಂದು ದಿನದ ರಜೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳ 10 ತಾಲೂಕುಗಳ ಶಾಲಾ, ಕಾಲೇಜುಗಳಿಗೆ 2 ದಿನದ ರಜೆ ಘೋಷಣೆ ಮಾಡಲಾಗಿದೆ. ಇದೀಗ ಯೆಲ್ಲೋ ಅಲರ್ಟ್ ಹೊಂದಿರುವ ಜಿಲ್ಲೆಗಳಾದ ಕೊಡಗು ಜಿಲ್ಲೆಯ ಹಾಗೂ ಹಾಸನ ಜಿಲ್ಲೆಯ 3 ತಾಲೂಕುಗಳ ಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ರಜೆ:
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ನಾಳೆ ಅಂದರೆ ಸೋಮವಾರ (ಆ.18ರಂದು) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಹಾಸನದ 3 ತಾಲೂಕುಗಳಿಗೆ ಮಾತ್ರ ರಜೆ:
ಇನ್ನು ಮಲೆನಾಡು ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಹಾಸನ ಜಿಲ್ಲೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಆದ್ದರಿಂದ ಭಾರೀ ಮಳೆಯನ್ನು ಪಡೆಯುವ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಮಕ್ಕಳು ಮಳೆ ಬೀಳುವ ವೇಳೆ ಎಲ್ಲಿಯೂ ಹೊರಗೆ ಹೋಗದಂತೆ, ಕೆರೆ, ಕಾಲುವೆ, ಹಳ್ಳ ಅಥವಾ ನದಿ ತೀರಗಳಲ್ಲಿ ಆಟವಾಡದಂತೆ ಮುಂಜಾಗ್ರತೆ ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆ:
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 25,000 ರಿಂದ 50,000 ಕ್ಯುಸೆಕ್ಸ್ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗು ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದಿಂದ ಮುಂಜಾಗ್ರತಾ ಸೂಚನೆ ನೀಡಲಾಗಿದೆ.
