ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡಿನ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು (ಸೆ.26): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಕರಾವಳಿ ಹಾಗೂ ಮಲೆನಾಡು ಭಾಗದ 6 ಜಿಲ್ಲೆಗಳಿಗೆ ಇಂದಿನಿಂದ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯಾಗಿ 'ಯೆಲ್ಲೋ ಅಲರ್ಟ್' (Yellow Alert) ಘೋಷಿಸಲಾಗಿದೆ.

6 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಮುಂದಿನ 4 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಜೊತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲ ಪ್ರದೇಶಗಳಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಬಹುದು ಎಂದು ಇಲಾಖೆ ತಿಳಿಸಿದೆ.