ಸಂವಿಧಾನದ ಆಶಯ ತಿಳಿದು ಸಾರ್ವಜನಿಕರಿಗೆ ಸ್ಪಂದಿಸಿ: ಕೆ.ಎನ್.ಫಣೀಂದ್ರ
ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕುಂದು ಕೊರತೆ ಆಲಿಸಿದರು.
ವರದಿ: ರವಿ ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಜ.21): ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕುಂದು ಕೊರತೆ ಆಲಿಸಿದರು. ಅಹವಾಲು ಸ್ವೀಕಾರಕ್ಕೂ ಮೊದಲು ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭಾರತ ಸಂವಿಧಾನವು ಪ್ರಜೆಗಳಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದ್ದು, ಸಂವಿಧಾನದ ಆಶೋತ್ತರ ಮತ್ತು ಆಶಯಗಳನ್ನು ಅರ್ಥಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದೆ. ರಾಷ್ಟ್ರಕವಿ ಕುವೆಂಪು ಅವರು ಹೇಳಿರುವಂತೆ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ಇದೆ. ಆದ್ದರಿಂದ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ಜನರಿಗೆ ತಲುಪಬೇಕು. ಎಲ್ಲರೂ ಸರಿಸಮಾನವಾಗಿ ಬದುಕು ನಡೆಸುವಂತಾಗಬೇಕು ಎಂದು ಕೆ.ಎನ್.ಫಣೀಂದ್ರ ಅವರು ನುಡಿದರು.
ಪ್ರತಿಯೊಬ್ಬರೂ ಸಮೃದ್ಧಿಯ ಜೀವನ ನಡೆಸುವಂತಾಗಬೇಕು. ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯ ಪಾಲಿಸುವುದನ್ನು ಮರೆಯಬಾರದು ಎಂದರು. ಸಂವಿಧಾನದಲ್ಲಿ ಶಾಸಕಾಂಗ ಕಾನೂನು ಜಾರಿ ಮಾಡಿದರೆ, ಕಾರ್ಯಾಂಗ ಅನುಷ್ಠಾನಗೊಳಿಸುತ್ತದೆ. ನ್ಯಾಯಾಂಗವು ಕಾನೂನನ್ನು ಸಂರಕ್ಷಣೆ ಮಾಡುತ್ತದೆ. ಜೊತೆಗೆ ಮಾಧ್ಯಮ ರಂಗವು ಸಮಾಜಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ವಿವರಿಸಿದರು.
ಸಾರ್ವಜನಿಕವಾಗಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರೂ ಸಮಾಜದಲ್ಲಿ ಉತ್ತರದಾಯಿತ್ವ ಹೊಂದಿರಬೇಕು. ಆ ನಿಟ್ಟಿನಲ್ಲಿ ಕರ್ತವ್ಯ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಲಮಿತಿಯಲ್ಲಿ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.
ಸಾರ್ವಜನಿಕರಿಗೆ ತೊಂದರೆಯಾದಲ್ಲಿ/ ಕರ್ತವ್ಯ ಲೋಪ ಎಸಗಿದ್ದಲ್ಲಿ ಲೋಕಾಯುಕ್ತ ಸಂಸ್ಥೆಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ. ಆ ನಿಟ್ಟಿನಲ್ಲಿ ಲೋಕಾಯುಕ್ತವು ವಿಚಾರಣೆ ಮಾಡಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ತಿಳಿಸಿದರು.
ಲೋಕಾಯುಕ್ತ ಸಂಸ್ಥೆಗೆ ವೈಯಕ್ತಿಕ ಹಾಗೂ ಸಾರ್ವಜನಿಕ ಹಕ್ಕುಗಳ ಬಗ್ಗೆ ದೂರು ಸಲ್ಲಿಸಬಹುದಾಗಿದ್ದು, ವೈಯಕ್ತಿಕ ಹಾಗೂ ಸಾರ್ವಜನಿಕ ಹಕ್ಕುಗಳು ಉಲ್ಲಂಘನೆ ಆಗದಂತೆ ಗಮನಹರಿಸಬೇಕು. ಉಲ್ಲಂಘನೆ ಆದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆಯಬಹುದು. ಹಾಗೆಯೇ ಮೂಲಭೂತ ಹಕ್ಕುಗಳು ಉಲ್ಲಂಘನೆಯಾದಲ್ಲಿ ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಬೇಕಿದೆ ಎಂದರು.
ಚಿತ್ರಕಲಾ ಪರಿಷತ್ತಿನ ಆವರಣದಲ್ಲಿಇಂಡಿಯನ್ ಆರ್ಟಿಸಾನ್ಸ್ ಬಜಾರ್
ಪ್ರತಿಯೊಬ್ಬರೂ ಶಿಸ್ತು ಬದ್ಧ ಜೀವನ ನಡೆಸಬೇಕು. ಸಾರ್ವಜನಿಕ ಜೀವನದಲ್ಲಿ ದ್ರೋಹ ಬಗೆಯಬಾರದು. ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕು ಎಂದು ವಿವರಿಸಿದರು. ‘ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ 39 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಗನ್ನು ಸ್ಥಳದಲ್ಲಿಯೇ ಕರೆಸಿ ವಿಚಾರಣೆ ನಡೆಸಿದರು. ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿ ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಮಡಿಕೇರಿ ನಗರದಿಂದ ಜಿಲ್ಲಾ ಪಂಚಾಯತ್ ಕಚೇರಿ ಹೊರಭಾಗದಲ್ಲಿ ಇರುವುದರಿಂದ ಪ್ರತೀ ನಿತ್ಯ ಅರ್ಧ ಗಂಟೆಗೊಮ್ಮೆ ಬಸ್ ಸೌಕರ್ಯ ಕಲ್ಪಿಸುವಂತೆ ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.
ರಾಜ್ಯದ ಅತಿದೊಡ್ಡ ಪುನೀತ್ ಪ್ರತಿಮೆ ಬಳ್ಳಾರಿಯಲ್ಲಿ ಅನಾವರಣ: ರಾಜ್ ಕುಮಾರ್ ಕುಟುಂಬಸ್ಥರು ಭಾಗಿ
ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟ್ರಾರ್ ಎನ್‍ಕ್ವಯರಿ ವಿಭಾಗದ ಹಿರಿಯ ನ್ಯಾಯಾಧೀಶರಾದ ಚೆನ್ನಕೇಶವ ರೆಡ್ಡಿ, ಕರ್ನಾಟಕ ಲೋಕಾಯುಕ್ತದ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ನಾರಾಯಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು, ಮೈಸೂರು ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕೃಷ್ಣಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಮಡಿಕೇರಿ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಲೋಕೇಶ್ ಇದ್ದರು.