ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಸಮೀಪದ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಕೋಲಾರ (ಸೆ.24): ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ (Chennai-Bengaluru Expressway) ಮೇಲೆ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದ್ದು, ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅತಿವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (Divider) ಭೀಕರವಾಗಿ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದವರು ಮಹಾರಾಷ್ಟ್ರದ ಪುಣೆ ಮೂಲದವರು ಎಂದು ಶಂಕಿಸಲಾಗಿದೆ. ಆದರೆ, ಮೃತರ ನಿಖರವಾದ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಾಯಗೊಂಡ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ತಕ್ಷಣವೇ ಬಂಗಾರಪೇಟೆ ಹಾಗೂ ಕೋಲಾರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಂಗಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


