ಗಂಗಾವತಿಯಲ್ಲಿ ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಚ್.ಜಿ.ರಾಮುಲು ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 2028ರಲ್ಲೂ ಮತ್ತೆ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಂಗಾವತಿ (ಸೆ.05): ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2028ರಲ್ಲೂ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಚ್.ಜಿ.ರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಸಮೀಪದ ಬೂದೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಂಡಿಯಾಗದ ಸಂಕಲ್ಪ ಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಿ ಉತ್ತಮ ಅವಕಾಶ ಸಿಕ್ಕಿದೆ. ಅಧಿಕಾರಾವಧಿ ಕಡಿಮೆಯಿದ್ದರೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲೂ ಡಿ.ಕೆ.ಶಿವಕುಮಾರ್ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಆಶಯ ಎಂದು ಹೇಳಿದರು.

ಬೂದೇಶ್ವರ ದೇವಸ್ಥಾನವು ಪುಣ್ಯ ಕ್ಷೇತ್ರವಾಗಿದ್ದು, ರಾಮಾಯಣ ಕಾಲದಲ್ಲಿ ಶ್ರೀರಾಮಚಂದ್ರರು ಈ ಪ್ರದೇಶಕ್ಕೆ ಭೇಟಿ ನೀಡಿದ್ದರು ಎಂಬ ನಂಬಿಕೆಯಿದೆ. ಇದೇ ಪವಿತ್ರ ಭೂಮಿಯಲ್ಲಿ ಭೂದೇಶ್ವರ ದೇವರ ದೇವಸ್ಥಾನವನ್ನು ಸ್ಥಾಪಿಸಲಾಗಿದೆ ಎಂದು ಎಚ್.ಜಿ.ರಾಮುಲು ತಿಳಿಸಿದರು. ದೇವಸ್ಥಾನ ನಿರ್ಮಾಣಕ್ಕೂ ಮುನ್ನವೇ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಈ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ಅವರ ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಇಲ್ಲಿಗೆ ಭೇಟಿ ನೀಡಿರುವುದು ವಿಶೇಷ ಎಂದರು.

ಸಂತಸದ ಸಂಗತಿ

ಡಿ.ಕೆ.ಶಿವಕುಮಾರ್ ಅವರು ತಮ್ಮ ಶಿಷ್ಯನ ರೀತಿಯವರಾಗಿದ್ದು, ಅವರು ಮುಖ್ಯಮಂತ್ರಿಯಾಗಿರುವುದು ಸಂತಸದ ಸಂಗತಿ. ರಾಜ್ಯದಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಆದರೆ ಲಭ್ಯವಿರುವ ಸಮಯ ಕಡಿಮೆಯಾಗಿದೆ. ಹೀಗಾಗಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಮುಂದಿನ ಬಾರಿಯೂ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ್, ವಿಜಯನಗರ ಶಾಸಕ ಗವಿಯಪ್ಪ, ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಸವರಾಜ ಹಿಟ್ನಾಳ್, ಕೆ.ಕಾಳಪ್ಪ, ಮುಸ್ಟೂರು ರಾಜಶೇಖರಪ್ಪ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್, ಡಾ. ಎ.ಸೋಮರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.