ಗಂಗಾವತಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿ, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಗಂಗಾವತಿ (ನ.25): ರಾಜ್ಯದಲ್ಲಿ ದಿನನಿತ್ಯದ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚನ್ನಬಸವ ಸ್ವಾಮಿ ವೃತ್ತದಿಂದ (ಸಿಬಿಎಸ್ ವೃತ್ತ) ಗಾಂಧಿ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರವಾಗುವ ಬದಲು ರಿಯಲ್ ಎಸ್ಟೇಟ್ ಸರ್ಕಾರವಾಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವಂತೆ ಕಾಣುತ್ತಿದೆ. ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ತೀವ್ರವಾಗಿ ಟೀಕಿಸಿದರು.

ಕಾಂಗ್ರೆಸ್ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ನಂದಿನಿ ತುಪ್ಪದ ಬೆಲೆ ಪ್ರತಿ ಕೆ.ಜಿ.ಗೆ ₹850ರ ಗಡಿ ತಲುಪಿದ್ದು, ಹಾಲು, ಮೊಸರು, ಅಕ್ಕಿ ಸೇರಿದಂತೆ ದಿನನಿತ್ಯ ಬಳಕೆಯ ವಿವಿಧ ಆಹಾರ ಪದಾರ್ಥಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಜೀವನ ನಿರ್ವಹಣೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕಾದ ಸರ್ಕಾರವೇ ಬೆಲೆ ಏರಿಕೆಯ ಮೂಲಕ ಮತ್ತಷ್ಟು ಹೊರೆ ಹೇರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರವು ಜನಸಾಮಾನ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ಬಂದಾಗಿನಿಂದ ರೈತರಿಗೆ ಮತ್ತು ಜನ ಸಾಮಾನ್ಯರಿಗೆ ಅನ್ಯಾಯ ಮಾಡುತ್ತಾ ಬಂದಿದೆ. ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದ್ದು, ಸರಕಾರ ಅನುದಾನ ನೀಡುವಲ್ಲಿ ವಿಫಲವಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಂಸದ ಶಿವರಾಮೆಗೌಡ, ಮಾಜಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಮಾಜಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನೋಹರಗೌಡ ಹೇರೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಅರಕೇರಿ, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಆಗೋಲಿ, ಪಕ್ಷದ ಮುಖಂಡರಾದ ವೀರೇಶ್ ಬಲಕುಂದಿ, ಅಮರಜ್ಯೋತಿ ನರಸಪ್ಪ, ವಿರೂಪಾಕ್ಷಪ್ಪ ಹೇರೂರು, ಮೌಲಸಾಬ್, ಜೋಗದ ಹನುಮಂತಪ್ಪನಾಯಕ, ವೀರಭದ್ರಪ್ಪನಾಯಕ ಅಮರಗುಂಡಪ್ಪ ಜೀಡಿ, ಚೆನ್ನವೀರನಗೌಡ ಕೋರಿ, ರಮೇಶ್ ಹೊಸಮಲಿ, ವಿಶ್ವನಾಥ ಕೇಸರಹಟ್ಟಿ, ಮಹಾಂತೇಶ ಸ್ವಾಮಿ, ಬಸವರಾಜ್ ಸೇರಿದಂತೆ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.