ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆ ದಾಳಿಗೆ ಹಫೀಜುರ್ ರೆಹಮಾನ್ ಎಂಬುವವರು ಬಲಿಯಾಗಿದ್ದು, ಮೂರು ದಿನಗಳಲ್ಲಿ ಎರಡನೇ ಸಾವಾಗಿದೆ. ಆಕ್ರೋಶಗೊಂಡ ಜನತೆಯಿಂದ ರಸ್ತೆ ತಡೆದು ಭಾರಿ ಪ್ರತಿಭಟನೆ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹಾಸನ (ನ.16): ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ. ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಫೀಜುರ್ ರೆಹಮಾನ್ (57) ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ. ಕೇವಲ ಮೂರು ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾಗಿರುವುದು ಇಡೀ ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದ್ದು, ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಇದರ ಬೆನ್ನಲ್ಲೇ ಉದ್ವಿಗ್ನ ವಾತಾವರಣ ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು 3 ದಿನಗಳ ಕಾಲ ಮದ್ಯ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಬೇಲೂರು ತಾಲ್ಲೂಕಿನಾದ್ಯಂತ 3 ದಿನ 'ಡ್ರೈ ಡೇ' ಆದೇಶ
ಕಳೆದ ಶನಿವಾರವಷ್ಟೇ ಚೌಡನಹಳ್ಳಿ ಬಳಿ ಜಯಮ್ಮ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಆ ಘಟನೆಯ ಕಾವು ಆರುವ ಮುನ್ನವೇ ಮತ್ತೊಂದು ಸಾವು ಸಂಭವಿಸಿರುವುದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಇಂದಿನಿಂದ (ನವೆಂಬರ್ 16) ನವೆಂಬರ್ 18ರ ಮಧ್ಯರಾತ್ರಿವರೆಗೆ ಬೇಲೂರು ತಾಲ್ಲೂಕಿನಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ 'ಡ್ರೈ ಡೇ' (Dry Day) ಘೋಷಣೆ ಮಾಡಲಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಸ್ತೆಯಲ್ಲೇ ಶಾಮಿಯಾನ ಹಾಕಿ ಶವವಿಟ್ಟು ಭಾರಿ ಪ್ರತಿಭಟನೆ
ರೆಹಮಾನ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ತೀವ್ರ ಪ್ರತಿಭಟನೆ ಆರಂಭಿಸಿದ್ದಾರೆ. ಬೇಲೂರು ತಾಲ್ಲೂಕು ಆಸ್ಪತ್ರೆ ಎದುರಿನ ಮುಖ್ಯ ರಸ್ತೆಯಲ್ಲೇ ಶಾಮಿಯಾನ ಹಾಕಿ, ರೆಹಮಾನ್ ಅವರ ಮೃತದೇಹವನ್ನು ಇಟ್ಟು ಪ್ರತಿಭಟನಾಕಾರರು ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಇದರಿಂದಾಗಿ ಬೇಲೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸಚಿವರು ಸ್ಥಳಕ್ಕೆ ಬರುವಂತೆ ಪಟ್ಟು
ಸಿಸಿಎಫ್, ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ:ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಿಸಿಎಫ್ (CCF) ಏಡುಕುಂಡಲ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ತೀವ್ರ ತರಾಟೆಗೆ ತೆಗೆದುಕೊಂಡರು. 'ಜನ ಸತ್ತಾಗ ಮಾತ್ರ ಸ್ಥಳಕ್ಕೆ ಬರ್ತೀರಾ? ಕಾಡಾನೆಗಳು ಸಾಲು ಸಾಲಾಗಿ ಜೀವ ತೆಗೆಯುತ್ತಿದ್ದರೂ ಇಷ್ಟು ದಿನ ಕಣ್ಣು ಮುಚ್ಚಿ ಸುಮ್ಮನಿದ್ದಿರಾ?' ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಪುಂಡಾನೆಗಳನ್ನು ತಕ್ಷಣವೇ ಸ್ಥಳಾಂತರ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಜನರು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಖುದ್ದಾಗಿ ಬಂದು ಶಾಶ್ವತ ಪರಿಹಾರದ ಭರವಸೆ ನೀಡುವವರೆಗೂ ಮೃತದೇಹವನ್ನು ಎತ್ತುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.










