ಮಂಗಳೂರು [ಆ.28]: ಮಂಗಳೂರು ಮಹಾನಗರ ಪಾಲಿಕೆಗೆ ಇದೇ ನವೆಂಬರ್‌ 15ರೊಳಗೆ ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಮಂಗಳವಾರ ಆದೇಶ ನೀಡಿದೆ. ಈ ಕುರಿತು ಮಂಗಳೂರು ನಿವಾಸಿಗಳಾದ ಅಬ್ದುಲ್‌ ಗಫರ್‌ ಹಾಗೂ ಮೊಹಮ್ಮದ್‌ ಹನೀಫ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಹಾಗೂ ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿ ಅರ್ಜಿ ಇತ್ಯರ್ಥಪಡಿಸಿತು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿ, ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಆಯೋಗವು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿಲ್ಲ. ಮೀಸಲಾತಿಗೆ ಸಂಬಂಧಿಸಿದ ವ್ಯಾಜ್ಯಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇವೆ. ಇದರಿಂದ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ. ಸದ್ಯ ನ್ಯಾಯಾಲಯದಲ್ಲಿದ್ದ ಅರ್ಜಿಗಳು ಹಾಗೂ ಮೇಲ್ಮನವಿಗಳು ಇತ್ಯರ್ಥಗೊಂಡಿದ್ದು, ಚುನಾವಣೆ ನಡೆಸಲು ಆಯೋಗ ಸಿದ್ಧವಿದೆ ಎಂದು ತಿಳಿಸಿದರು.

ಆ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, 2019ರ ನ.15ರೊಳಗೆ ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆಯೋಗಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು. ಅವಧಿ ಪೂರ್ಣಗೊಂಡಿರುವ ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಅರ್ಜಿಯಲ್ಲಿ ಕೋರಿದ್ದರು.