ಮತ್ತೆ ಚಿಕ್ಕಬಳ್ಳಾಪುರಕ್ಕೇ ಬಂತು ವೈದ್ಯ ಕಾಲೇಜು!

ಕನಕಪುರ ಜಿಲ್ಲೆಗೆ ಸ್ಥಳಾಮತರವಾಗಿದ್ದ ಮೆಡಿಕಲ್ ಕಾಲೇಜನ್ನು ಮತ್ತೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಸ್ಥಳಾಂತರ ಮಾಡಲಾಗಿದೆ. 

Medical College Sanctioned To Chikkaballapura District

ಬೆಂಗಳೂರು (ಅ.04): ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಕನಕಪುರ ತಾಲೂಕಿಗೆ ಸ್ಥಳಾಂತರಗೊಂಡಿದ್ದ ವೈದ್ಯಕೀಯ ಕಾಲೇಜನ್ನು ಮತ್ತೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಸ್ಥಳಾಂತರಿಸಿ, ಅಗತ್ಯ ಜಮೀನು ಒದಗಿಸಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ‘ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ವಿಷಯವನ್ನು ಮಂಡಿಸಿದರು. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಿಲ್ಲ ಎನಿಸುತ್ತದೆ’ ಎಂದರು. ಆದರೆ, ಮೂಲಗಳ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಅಗತ್ಯ ಜಮೀನು ಒದಗಿಸಲು ಒಪ್ಪಿಗೆ ನೀಡಲಾಗಿದೆ.

ಏನಿದು ವೈದ್ಯಕೀಯ ಕಾಲೇಜು ವಿವಾದ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಮ್ಮ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಿಸಿದ್ದರು. ಆದರೆ, ತಮ್ಮ ಅಧಿಕಾರವಧಿ ಮುಗಿಯುವವರೆಗೆ ಅಗತ್ಯ ಅನುದಾನ ಒದಗಿಸಿರಲಿಲ್ಲ.

ಬಳಿಕ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರು ಚಿಕ್ಕಬಳ್ಳಾಪುರ ಜಿಲ್ಲೆಗೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಕನಕಪುರ ತಾಲೂಕಿಗೆ ವರ್ಗಾಯಿಸಿಕೊಂಡಿದ್ದರು ಎಂಬ ಆರೋಪ ವ್ಯಕ್ತವಾಗಿತ್ತು. ರಾಮನಗರ ಜಿಲ್ಲೆಗೆ ಈಗಾಗಲೇ ಒಂದು ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿದೆ. ಅದನ್ನು ಹೊರತುಪಡಿಸಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿಗೆ ಮತ್ತೊಂದು ವೈದ್ಯಕೀಯ ಕಾಲೇಜು ಮಂಜೂರು ಮಾಡಿದ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಚಿಕ್ಕಬಳ್ಳಾಪುರ ಶಾಸಕರಾಗಿದ್ದ ಡಾ.ಕೆ. ಸುಧಾಕರ್‌ ಅವರೂ ಆಕ್ರೋಶ ವ್ಯಕ್ತಪಡಿಸಿದ್ದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮತ್ತೆ ವೈದ್ಯಕೀಯ ಕಾಲೇಜು ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಕೆಲ ಸಂಘಟನೆÜಗಳು ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಕೊನೆಗೂ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ.

Latest Videos
Follow Us:
Download App:
  • android
  • ios