ರಾಜ್ಯದ 3 ಕಡೆ ಬಂಡವಾಳ ಹೂಡಿಕೆದಾರರ ಸಮಾವೇಶ: ಜಗದೀಶ ಶೆಟ್ಟರ್
ಸ್ಥಳೀಯರಿಗೆ ಉದ್ಯೋಗ ನೀಡಲು ವಿಫುಲ ಅವಕಾಶ| ವಿಜಯಪುರ- ಬಾಗಲಕೋಟೆ, ಕಲಬುರಗಿ- ಬೀದರ್- ರಾಯಚೂರ ಹಾಗೂ ಮೈಸೂರು ಭಾಗದಲ್ಲಿ ಹೂಡಿಕೆದಾರರ ಸಮಾವೇಶ ನಡೆಸಲು ಚಿಂತನೆ| ಹೂಡಿಕೆದಾರರ ಸಮಾವೇಶ ನಡೆಸಲು ಉದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಸಾರ್ವಜನಿಕರಿಂದ ಬೇಡಿಕೆಗಳು ಬಂದಿವೆ: ಸಚಿವ ಜಗದೀಶ ಶೆಟ್ಟರ್|
ವಿಜಯಪುರ(ಮಾ.13): ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯದ ಮೂರು ಕಡೆಗಳಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಶುಕ್ರವಾರ ವಿಜಯಪುರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೈಗಾರಿಕೆ ಕ್ಷೇತ್ರದ ಬೆಳವಣಿಗೆಗೆ ರಾಜ್ಯದ ವಿಜಯಪುರ- ಬಾಗಲಕೋಟೆ, ಕಲಬುರಗಿ- ಬೀದರ್- ರಾಯಚೂರ ಹಾಗೂ ಮೈಸೂರು ಭಾಗದಲ್ಲಿ ಹೂಡಿಕೆದಾರರ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಹೂಡಿಕೆದಾರರ ಸಮಾವೇಶ ನಡೆಸಲು ಉದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಸಾರ್ವಜನಿಕರಿಂದ ಬೇಡಿಕೆಗಳು ಬಂದಿವೆ. ಹಾಗಾಗಿ ಈ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಮುಳವಾಡ ಬಳಿ ಕೈಗಾರಿಕೆಗೆ ಸಂಬಂಧಿಸಿದಂತೆ 3,000 ಎಕರೆ ಜಮೀನಿದೆ. ಈ ಜಮೀನಿನ ಪೈಕಿ 560 ಎಕರೆ ಪ್ರದೇಶವನ್ನು ಕೈಗಾರಿಕೆ ಕ್ಷೇತ್ರಕ್ಕೆ ಪೂರಕವಾಗುವಂತೆ ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಹೀಗಾಗಿ ಈ ಭಾಗದಲ್ಲಿ ಬಂಡವಾಳ ಹೂಡಿಕೆದಾರರು ಆಗಮಿಸುತ್ತಿದ್ದಾರೆ ಎಂದರು.
'ಸಿಡಿ ಮಾಡಿ ಬ್ಲಾಕ್‌ಮೇಲ್ ಮಾಡೋದು ಕಾಂಗ್ರೆಸ್ ಸಂಸ್ಕೃತಿ'
ಬೃಹತ್ ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗಾರಿಕೆಗಳ ಕೇಂದ್ರೀಕೃತವಾಗುತ್ತಿವೆ. ಆದ್ದರಿಂದ ರಾಜ್ಯದ 2ನೇ ಹಾಗೂ 3ನೇ ನಗರ ಪ್ರದೇಶಗಳಲ್ಲಿ ಕೈಗಾರಿಕೆ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೊಸ ಕೈಗಾರಿಕೆ ನೀತಿಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲು ವಿಫುಲ ಅವಕಾಶಗಳಿವೆ. ಹೊಸದಾಗಿ ಆರಂಭವಾಗುತ್ತಿರುವ ಕೈಗಾರಿಕೆಗಳಲ್ಲಿ ತಾಂತ್ರಿಕ ವಿಭಾಗದಲ್ಲಿ ಶೇ.70ರಷ್ಟು ಹಾಗೂ ಇತರೆ ವಿಭಾಗದಲ್ಲಿ ಶೇ.100ರಷ್ಟು ಉದ್ಯೋಗಾವಕಾಶಗಳಿವೆ. ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಒಂದೊಮ್ಮೆ ಸ್ಥಳೀಯರಿಗೆ ಉದ್ಯೋಗ ನಿರಾಕರಿಸಿದರೆ ಅಂತಹ ಕೈಗಾರಿಕೋದ್ಯಮಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ಕೈಗಾರಿಕೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಿನ್ನಡೆಯಾಗಿದೆ. ಈಗ ಕೊರೋನಾ ಕಡಿಮೆಯಾಗುತ್ತಿದೆ. ಹಾಗಾಗಿ ಪ್ರತಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕೈಗಾರಿಕೆ ಅಭಿವೃದ್ಧಿಗೆ ಅಗತ್ಯವಿರುವ ಜಾಗ, ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದರು.