ಬೆಂಗಳೂರು(ಫೆ.07): ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಾರರ ಸಮಗ್ರ ಅಭಿವೃದ್ಧಿಗಾಗಿ ಇಲಾಖೆ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ಕ್ಷೇತ್ರ ಮಟ್ಟದ ಬೇಡಿಕೆಗಳಿಗೆ ತಕ್ಕಂತೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್‌.ಶಂಕರ್‌ ತಿಳಿಸಿದ್ದಾರೆ.

ಶನಿವಾರ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಾರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ವಿಸ್ತೀರ್ಣ 23.25 ಲಕ್ಷ ಹೆಕ್ಟೇರ್‌ ಇದ್ದು, ವಾರ್ಷಿಕ ಉತ್ಪಾದನೆ 183.46 ಲಕ್ಷ ಮೆಟ್ರಿಕ್‌ ಟನ್‌ಗಳಷ್ಟಿದೆ. ರಾಷ್ಟ್ರಮಟ್ಟದಲ್ಲಿ ರಾಜ್ಯ ತೋಟಗಾರಿಕೆ ವಿಸ್ತೀರ್ಣದಲ್ಲಿ ಮೊದಲ ಸ್ಥಾನದಲ್ಲಿದ್ದು ಉತ್ಪಾದನೆಯಲ್ಲಿ ಎಂಟನೇ ಸ್ಥಾನವಿದೆ. ತೋಟಗಾರಿಕೆ ಬೆಳೆಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಪ್ರೋತ್ಸಾಹದಾಯಕ ಯೋಜನೆಗಳನ್ನು ಕೈಗೊಂಡಿವೆ. ಜತೆಗೆ ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಾರರ ಅಭಿವೃದ್ಧಿಗೆ ಬೇಡಿಕೆಗೆ ತಕ್ಕಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

ಹಾವೇರಿ ಉಸ್ತುವಾರಿ ಮಾಡುವ ಸಿಎಂ ಭರವಸೆ ನೀಡಿದ್ದಾರೆ: ಶಂಕರ್‌

ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವು ರೈತರು, ತೋಟಗಾರಿಕಾ ಬೆಳೆಗಾರರು ಬೆಳೆದಂತ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆವ್ಯವಸ್ಥೆ ಇಲ್ಲ. ಹಲವು ಯೋಜನೆಗಳು ಜಾರಿಯಲ್ಲಿದ್ದರೂ ಪ್ರತಿ ಜಿಲ್ಲೆಗೆ ನೀಡಲಾಗುತ್ತಿರುವ ಅನುದಾನ ಹೆಚ್ಚಿಸಬೇಕು. ಬೇಡಿಕೆಗೆ ತಕ್ಕಂತೆ ಅನುದಾನ ಕೊಡಬೇಕು. ಸಬ್ಸಿಡಿ ಹೆಚ್ಚಳ ಮಾಡಬೇಕು. ಹಿರಿತನದ ಆಧಾರದ ಮೇಲೆ ಸಹಾಯಧನ ಹಂಚಿಕೆ ಮಾಡಲು ಕ್ರಮವಹಿಸಬೇಕು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾವು ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್‌, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ಆಯುಕ್ತೆ ಫೌಜಿ‚ಯಾ ತರುನ್ನಂ ಮತ್ತು ರಾಜ್ಯದ 30 ಜಿಲ್ಲೆಗಳ ರೈತರು ಪಾಲ್ಗೊಂಡಿದ್ದರು.