'ಈ ಕ್ಷೇತ್ರದ ಗೆಲುವಿನಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ'
ಚಿಂಚೋಳಿ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದಾರೆ: ದೊಡ್ಡಪ್ಪಗೌಡ ಪಾಟೀಲ್ ನರಬೋಳ| ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಕಾಂಗ್ರೆಸ್ ಜನರಿಗೆ ದಾರಿ ತಪ್ಪಿಸುತ್ತಿದೆ| ಮೋದಿ ಮತ್ತು ಅಮಿತ್ ಶಾ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಕಾಂಗ್ರೆಸ್ ದೇಶದ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ|
ಚಿಂಚೋಳಿ(ಜ.29): ಮೀಸಲು ಚಿಂಚೋಳಿ ವಿಧಾನಸಭಾ ಮತಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರಿಂದಲೇ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಮತಕ್ಷೇತ್ರದ ಜನತೆ ನೀಡಿದ ಆಶೀರ್ವಾದ ಮತ್ತು ಕಾರ್ಯಕರ್ತರ ಪರಿಶ್ರಮದಿಂದಾಗಿ ನಾವು ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ ಎಂದು ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಬೋಳ ಹೇಳಿದ್ದಾರೆ.
ಪಟ್ಟಣದ ಹಾರಕೂಡ ಚೆನ್ನಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಿಎಎ ಅಭಿಯಾನ ಮತ್ತು ಬೂತ್‌ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ತಾಲೂಕು ಬಿಜೆಪಿ ಮಂಡಲ ನೂತನ ಅಧ್ಯಕ್ಷ ಸಂತೋಷ ಗಡಂತಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.
ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಕಾಂಗ್ರೆಸ್ ಜನರಿಗೆ ದಾರಿ ತಪ್ಪಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪ್ರತಿಪಕ್ಷ ಕಾಂಗ್ರೆಸ್ ದೇಶದ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಬಿಜೆಪಿ ಕಾರ್ಯಕರ್ತರು ಸಿಎಎ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಹೇಳಿದರು.
ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ ಮಾತನಾಡಿದರು. ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಸಂತೋಷ ಗಡಂತಿ ಅವರಿಗೆ ಪಕ್ಷದ ಧ್ವಜ ಹಸ್ತಾಂತರ ಮಾಡಿ ಅಧಿಕಾರ ನೀಡಲಾಯಿತು. ಶಾಸಕ ಡಾ. ಅವಿನಾಶ್ ಜಾಧವ್ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡ, ರಾಜು ನಿಲಂಗೆ ಅಶೋಕ ಪಾಟೀಲ್ ಮಾತನಾಡಿದರು. ಅರುಣ್ ಪವಾರ್, ಅಜೀತ್ ಪಾಟೀಲ್, ಜಗದೀಶಸಿಂಗ್ ಠಾಕೂರ ಇದ್ದರು.