ಸಚಿವ ಸಂಪುಟ ಪುನಾರಚನೆ, ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕೆಜಿಎಫ್ ಶಾಸಕಿಯಾಗಿರುವ ರೂಪಕಲಾ ಶಶಿಧರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಕೋಲಾರ (ಜೂ.06): ಸಚಿವ ಸಂಪುಟ ಪುನಾರಚನೆ, ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕೆಜಿಎಫ್ ಶಾಸಕಿಯಾಗಿರುವ ರೂಪಕಲಾ ಶಶಿಧರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರು ತಮ್ಮ ಖಾತೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರೂಪಕಲಾ, "ಅವರೆಲ್ಲರೂ ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದಲ್ಲಿ ಕರೆದು ಮಾತನಾಡುವ ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಸಂಸ್ಕೃತಿ ಇದೆ. ಪಕ್ಷದ ವರಿಷ್ಠರು ಅವರೊಂದಿಗೆ ಚರ್ಚೆ ನಡೆಸಲಿದ್ದು, ಸರ್ಕಾರಕ್ಕೂ ತನ್ನದೇ ಆದ ಜವಾಬ್ದಾರಿಗಳಿವೆ. ಎಲ್ಲವೂ ಅವರ ಮಟ್ಟದಲ್ಲೇ ಬಗೆಹರಿಯಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿದ ಅವರು, "ಜಿಲ್ಲೆಯ ಅಭಿವೃದ್ಧಿಗೆ ಸಚಿವ ಸ್ಥಾನ ಅಗತ್ಯವಾಗಿದೆ. ಕೋಲಾರ ಜಿಲ್ಲೆಯಲ್ಲಿ ಸಾಕಷ್ಟು ಹಿರಿಯ ಹಾಗೂ ಅನುಭವಿ ನಾಯಕರು ಇದ್ದಾರೆ. ಸರ್ಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು" ಎಂದು ಹೇಳಿದರು.
ಪಕ್ಷದ ನಿರ್ಧಾರಗಳಿಗೆ ಬದ್ಧರಾಗಿದ್ದೇವೆ
ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೂಪಕಲಾ, "ಪಕ್ಷ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನೂ ಸಮತೋಲನದಿಂದ ಪರಿಗಣಿಸುವ ಪರಂಪರೆ ಇದೆ. ನಾವು ಪಕ್ಷದ ನಿರ್ಧಾರಗಳಿಗೆ ಬದ್ಧರಾಗಿದ್ದೇವೆ" ಎಂದು ತಿಳಿಸಿದರು.
ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ಸಿಗುವ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, "ಪಕ್ಷ ಈಗಾಗಲೇ ನನಗೆ ಕೆಲವು ಜವಾಬ್ದಾರಿಗಳನ್ನು ನೀಡಿದೆ. ಜೊತೆಗೆ ಕ್ಷೇತ್ರದ ಜನರು ಸೇವೆ ಮಾಡುವ ಅವಕಾಶ ನೀಡಿದ್ದಾರೆ. ನನಗೆ ನೀಡಿರುವ ಜವಾಬ್ದಾರಿಗಳನ್ನು ಸೇವಾ ಮನೋಭಾವದಿಂದ ನಿರ್ವಹಿಸುತ್ತಿದ್ದು, ಅದೇ ನನ್ನ ಮೊದಲ ಆದ್ಯತೆ" ಎಂದು ಹೇಳಿದರು.


