ED Arrests Former MUDA Commissioner Dinesh Kumar ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇ.ಡಿ) ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಬಂಧಿಸಿದೆ.
ಬೆಂಗಳೂರು (ಸೆ.16): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ನಂತರ, ಇಡಿ ಅಧಿಕಾರಿಗಳು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿದ್ಧರಾಗಿದ್ದಾರೆ.
ದಿನೇಶ್ ಕುಮಾರ್ ಅವರು ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಸಾವಿರಾರು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪವಿದೆ. ಸರ್ಕಾರ ಮತ್ತು ಮುಡಾ ನಿಯಮಗಳನ್ನು ಉಲ್ಲಂಘಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನರ್ಹ ವ್ಯಕ್ತಿಗಳಿಗೆ ನಿವೇಶನಗಳನ್ನು ನೀಡಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ರಮಗಳಿಂದ ಅಪಾರ ಪ್ರಮಾಣದ ಹಣವನ್ನು ಗಳಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಈ ಹಿಂದೆ, ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾಗ ದಿನೇಶ್ ಕುಮಾರ್ ತಲೆಮರೆಸಿಕೊಂಡಿದ್ದರು, ನಂತರ ವಿಚಾರಣೆಗೆ ಹಾಜರಾಗಿದ್ದರು.
ಅಕ್ರಮಗಳ ಕುರಿತು ಸೂಕ್ತ ಉತ್ತರ ನೀಡಿದ ದಿನೇಶ್ ಕುಮಾರ್
ಇ.ಡಿ ಅಧಿಕಾರಿಗಳು ಇಂದು ದಿನೇಶ್ ಕುಮಾರ್ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆ ವೇಳೆ ಅವರು ಅಕ್ರಮಗಳ ಕುರಿತು ಸೂಕ್ತ ಉತ್ತರ ನೀಡದ ಕಾರಣ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿ ಹಣ ಗಳಿಸಿದ ಆರೋಪದ ಮೇಲೆ ಈ ಬಂಧನ ನಡೆದಿದೆ.
ಬಂಧನದ ನಂತರ ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಗುವುದು ಎಂದು ಇ.ಡಿ ತಿಳಿಸಿದೆ. ಈ ಹಗರಣದಲ್ಲಿ ಸಿ.ಎಂ. ಅವರ ಮೇಲೆಯೂ ಆರೋಪಗಳಿದ್ದವು, ಆದರೆ ಕೋರ್ಟ್ ಅವರಿಗೆ ಬಿಗ್ ರಿಲೀಫ್ ನೀಡಿತ್ತು. ಆದರೂ, ಈ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ದಿನೇಶ್ ಕುಮಾರ್ ಬಂಧನ ಮಹತ್ವದ ಬೆಳವಣಿಗೆಯಾಗಿದೆ.
