ಮೈಸೂರು (ಅ,01): ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಬಿ. ಶರತ್‌ ಅವರನ್ನು ವರ್ಗಾವಣೆ ಮಾಡಿ, ಆ ಜಾಗಕ್ಕೆ ರೋಹಿಣಿ ಸಿಂಧೂರಿಯನ್ನು ನಿಯೋಜಿಸಿದ ಸರ್ಕಾರದ ಕ್ರಮ ಇದೀಗ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಮೆಟ್ಟಿಲೇರಿದೆ. ತಮ್ಮನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್‌ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ. 

ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸಿಎಟಿ, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿದೆ. ಒಂದು ತಿಂಗಳ ಹಿಂದಷ್ಟೇ ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ತಮ್ಮನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇದೀಗ ಸೂಕ್ತ ಕಾರಣ ನೀಡದೆಯೇ ತಮ್ಮನ್ನು ವರ್ಗಾವಣೆ ಮಾಡಿರುವ ಸರ್ಕಾರ, ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿದೆ.

ಸೂಕ್ತ ಕಾರಣ ನೀಡದೆ, ಏಕಾಏಕಿ ತಮ್ಮನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ಕಾನೂನು ಬಾಹಿರವಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಬಿ.ಶರತ್‌ ಅರ್ಜಿಯಲ್ಲಿ ಕೋರಿದ್ದಾರೆ.

ವಿಚಾರಣೆ ನಡೆಸಿದ ಸಿಎಟಿ, 30 ದಿನಕ್ಕೆ ಬಿ.ಶರತ್‌ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಏಕೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು. ನಂತರ ಅರ್ಜಿ ಸಂಬಂಧ ಉತ್ತರಿಸುವಂತೆ ಸೂಚಿಸಿ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.