ತುಮಕೂರು(ಡಿ.23): ಜ.3ರಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಂದೋಬಸ್ತ್‌ ಸಂಬಂಧ ಸ್ಥಳ ಪರಿಶೀಲನೆ ನಡೆಸಲು ಬಂದಿದ್ದೇನೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭಾನುವಾರ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ತುಮಕೂರಿನಲ್ಲಿ ಎರಡನೇ ಹಂತದ ರೈತ ಸಮ್ಮಾನ್‌ ಯೋಜನೆಗೆ ಪ್ರಧಾನಮಂತ್ರಿಗಳು ಚಾಲನೆ ನೀಡಲಿದ್ದು, ಇದೇ ವೇಳೆ ರಾಜ್ಯ ರೈತ ಸಮಾವೇಶ ಹಮ್ಮಿಕೊಳ್ಳಲಾಗುವುದು. ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲ್ಲಿದ್ದು, ಪ್ರಧಾನಿ ನಮೋ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

'ಮೋದಿ ಪ್ರಧಾನಿಯಾದ ಮೇಲೆ ಭಾರತ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ'

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಂದೋಬಸ್‌್ತ ಕುರಿತು ಪರಿಶೀಲನೆ ನಡೆಸಲು ಬಂದಿದ್ದೇನೆ. ತುಮಕೂರು ಪ್ರಗತಿಪರವಾದ ಜಿಲ್ಲೆಯಾಗಿರುವುದರಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಬಂದೋಬಸ್‌್ತ ಕುರಿತು ಪರಿಶೀಲನೆ ನಡೆಸಲು ಬಂದಿದ್ದೇನೆ. ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಸಿದ್ಧಗಂಗಾ ಮಠಕ್ಕೂ ಭೇಟಿ

ರೈತ ಸಮಾವೇಶಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧಗಂಗಾ ಮಠಕ್ಕೂ ಭೇಟಿ ನೀಡಲಿದ್ದು, ಡಾ.ಶಿವಕುಮಾರಸ್ವಾಮಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗಸ್ವಾಮಿಗಳನ್ನು ಭೇಟಿ ಮಾಡಲಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಮಠದಲ್ಲಿರುತ್ತಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ನಿಯಂತ್ರಣ:

ಸೈಬರ್‌ ಕ್ರೈಂ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಮೇಲೆ ನಿಯಂತ್ರಣ ಹೇರಲು ಪ್ರಯತ್ನ ಮಾಡುತ್ತಿದ್ದೇವೆ. ಸೈಬರ್‌ ಕ್ರೈಂ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಪರ-ವಿರೋಧ ಚರ್ಚೆಯಲ್ಲಿ ಹದ್ದು ಮೀರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವರು ಹೇಳಿದ್ದಾರೆ.

ಮಾಜಿ ಸಿಎಂ ಹೇಳಿಕೆ ಸತ್ಯಕ್ಕೆ ದೂರ:

ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯಾಗಿದ್ದು, ಅವರು ಮಂಗಳೂರು ಹಿಂಸಾಚಾರ ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು. ಇಂದಿನ ಸ್ಥಿತಿಗೆ ಯಾರು ಕಾರಣ ಎಂಬುದು ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯನವರ ಹೇಳಿಕೆಗಳು ಸತ್ಯಕ್ಕೆ ದೂರವಾದ ಸಂಗತಿ ಎಂದು ಗೃಹ ಸಚಿವ ಬೊಮ್ಮಯಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಮಂಗಳೂರು ಗಲಭೆ: ವಿಡಿಯೋ ಇದ್ರೆ ಕಳಿಸಿ ಎಂದ ಕಮಿಷನರ್ ಹರ್ಷ

ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಮಾಜಿ ಎಂಎಲ್‌ಸಿ ಡಾ.ಎಂ.ಆರ್‌.ಹುಲಿನಾಯ್ಕರ್‌ ಇತರರಿದ್ದರು.

ರಾಜ್ಯದಲ್ಲಿ ಶಾಂತಿಯುತ ವಾತಾವರಣ: ಗೃಹ ಸಚಿವ

ರಾಜ್ಯದಲ್ಲಿ ಪೌರತ್ವ ಕಾಯ್ದೆ ಸಂಬಂಧ ನಡೆದ ಪ್ರತಿಭಟನೆ, ಹಿಂಸಾಚಾರದ ನಂತರ ಈಗ ಶಾಂತಿಯುತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಸಂಜೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಹಾಗೂ ಮಂಗಳೂರು ಗೋಲಿಬಾರ್‌ ತನಿಖೆ ಬಗ್ಗೆ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರ ಸರ್ಕಾರ ಅಭಿಯಾನ:

ಪೌರತ್ವ ಕಾಯ್ದೆ ಬಗ್ಗೆ ಮುಸ್ಲಿಮರಿಗೆ ಭಯ ಬೇಡ ಎಂದು ಅಭಯ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೌರತ್ವ ಕಾಯ್ದೆ ತಿದ್ದುಪಡಿಯ ಬಗ್ಗೆ ಜನರಿಗೆ ತಿಳಿಸಲು ಕೇಂದ್ರ ಸರ್ಕಾರ ಅಭಿಯಾನ ನಡೆಸಲಿದೆ. ಕಾಯ್ದೆ ಬಗ್ಗೆ ಇರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಲು ಅಭಿಯಾನ ಮಾಡುತ್ತೇವೆ ಎಂದಿದ್ದಾರೆ

ವಿಡಿಯೋಗಳು ಸಿಕ್ಕಿವೆ:

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಕೇರಳದಿಂದ ಬಂದವರು ಮುಖಕ್ಕೆ ಬಟ್ಟೆಕಟ್ಟಿಕೊಂಡು ಪೆಟ್ರೋಲ್ ಬಾಂಬ್‌ ಹಾಕಿದ್ದಾರೆ. ಈ ಬಗ್ಗೆ ವಿಡಿಯೋಗಳು ಸಿಕ್ಕಿವೆ. ತನಿಖೆ ಸಂದರ್ಭದಲ್ಲಿ ಎಲ್ಲವನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.

ಡಿಸೆಂಬರ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ