ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ಬೆಂಗಳೂರು (ಸೆ.07):  ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ (9ರ ವರೆಗೆ) ಮುಂಗಾರು ಚುರುಕಾಗಿರಲಿದ್ದು, ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಕೊಡಗು, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಸೆ.7 ಮತ್ತು 8ರಂದು ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸೆ.9ರಂದು ಅತಿ ಹೆಚ್ಚು ಮಳೆ ಬರುವ ಕಾರಣಕ್ಕೆ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬೀಳುವ ನೀರಿಕ್ಷೆ ಇದೆ.

ಮಳೆ ಕಡಿಮೆ ಇದ್ದರೂ ಹೆಚ್ಚುತ್ತಿದೆ ಪ್ರವಾಹ: ಲೆಕ್ಕಾಚಾರವೆಲ್ಲಾ ಬುಡಮೇಲಾಗುತ್ತಿರುವುದೇಕೆ?

ಅರಬ್ಬಿ ಸಮುದ್ರದ ಆಗ್ನೇಯ ಮತ್ತು ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯ ಎಲ್ಲ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಕಡಲ ತೀರದಲ್ಲಿ ಪ್ರತಿ ಗಂಟೆಗೆ ಸುಮಾರು 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಎಲ್ಲೆಲ್ಲಿ ಮಳೆ:

ಸೆ.6ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ 8 ಸೆಂ.ಮೀ, ದಕ್ಷಿಣ ಕನ್ನಡದ ಮಾನಿ 5, ಉಡುಪಿ ಜಿಲ್ಲೆಯ ಬ್ರಹ್ಮಾವರ, ಆಗುಂಬೆ ತಲಾ 4, ಉಡುಪಿಯ ಕಾರ್ಕಳ, ಬೆಳ್ತಂಗಡಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.