ಕೊಡಗು ಜಿಲ್ಲೆಯಲ್ಲಿ ನಿಪಾ ವೈರಸ್ ಆತಂಕ: ಕಟ್ಟೆಚ್ಚರ ವಹಿಸಿದ ಜಿಲ್ಲಾಡಳಿತ
ನೆರೆಯ ಕೇರಳ ರಾಜ್ಯದಲ್ಲಿ ನಿಪಾ ವೈರಸ್ಗೆ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಂತೆ ಇರುವ ಕೊಡಗು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು
ಕೊಡಗು (ಸೆ.15): ನೆರೆಯ ಕೇರಳ ರಾಜ್ಯದಲ್ಲಿ ನಿಪಾ ವೈರಸ್ಗೆ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಂತೆ ಇರುವ ಕೊಡಗು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕೇರಳ ರಾಜ್ಯದ ಕೋಝಿಕೋಡ್ ನಲ್ಲಿ ಇಬ್ಬರು ಈ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ಕೇರಳದಿಂದ ಕೊಡಗಿಗೆ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ಇರುವುದರಿಂದ ಕೇರಳ ಮತ್ತು ಕೊಡಗು ಜಿಲ್ಲೆಗಳ ನಡುವಿನ ಅಂತಾರಾಜ್ಯ ಗಡಿ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಕೇರಳದಲ್ಲಿ ನಿಪಾ ವೈರಸ್ನಿಂದ ಸಾವನ್ನಪ್ಪಿರುವ ಪ್ರದೇಶದಿಂದ ಬರುತ್ತಿರುವ ಜಿಲ್ಲೆಗಳ ಜನರ ಆರೋಗ್ಯ ಪರಿಶೀಲನೆಗೆ ಕೊಡಗು ಜಿಲ್ಲಾಡಳಿತ ಮುಂದಾಗಿದೆ.
ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯನ್ನು ಸಿದ್ಧಗೊಳಿಸಿದೆ. ಕೊಠಡಿಯಲ್ಲಿ ಏಳು ಹಾಸಿಗೆಗಳನ್ನು ಸಿದ್ಧಗೊಳಿಸಿದ್ದು, ವೆಂಟಿಲೇಟರ್ ಮತ್ತು ಆಕ್ಸಿಜನ್ ವ್ಯವಸ್ಥೆಯನ್ನು ಮಾಡಿದೆ. ಸದ್ಯ ಜಿಲ್ಲೆಯಲ್ಲಿ ನಿಪಾ ವೈರಸ್ನಿಂದ ಬಳಲುತ್ತಿರುವ ಒಂದು ಪ್ರಕರಣವೂ ಪತ್ತೆಯಾಗಿಲ್ಲ. ಆದರೆ ಒಬ್ಬ ವ್ಯಕ್ತಿಗೆ ಮಾತ್ರ ಮಿದುಳು ಜ್ವರದಂತಹ ಲಕ್ಷಣ ಕಾಣಿಸಿಕೊಂಡಿದ್ದು ಆ ವ್ಯಕ್ತಿಯಿಂದ ಸ್ಯಾಂಪಲ್ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಜನರಿಗೆ ನಿಪಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸತೀಶ್ ಹೇಳಿದ್ದಾರೆ.
ಉದಯನಿಧಿ ಸನಾತನ ಧರ್ಮ ಹೇಳಿಕೆ ಅವಿವೇಕತನದ್ದು: ಭಾಸ್ಕರ್ ರಾವ್
ಮತ್ತೊಂದೆಡೆ ಚಿಕಿತ್ಸೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ಜಿಲ್ಲಾಸ್ಪತ್ರೆ ಮೆಡಿಕಲ್ ಸರ್ಜನ್ ಡಾ. ರೂಪೇಶ್ ತಿಳಿಸಿದ್ದಾರೆ. ‘ನಿಫಾ’ ವೈರಸ್ ಕಾಯಿಲೆಯು 1998 ಮತ್ತು 1999 ನೇ ಇಸವಿಯಲ್ಲಿ, ಮಲೇಷಿಯಾ ಮತ್ತು ಸಿಂಗಪೂರ ದೇಶಗಳಲ್ಲಿನ ಮನೆಯಲ್ಲಿ ಸಾಕಿರುವ ಹಂದಿಗಳಲ್ಲಿ ಪತ್ತೆಯಾಗಿತ್ತು. ಮಲೇಷಿಯಾ ದೇಶದ ನಿಫಾ ಗ್ರಾಮದಲ್ಲಿ ಈ ವೈರಸ್ ಪ್ರಭೇದವನ್ನು ಪ್ರಪ್ರಥಮವಾಗಿ ಕಂಡು ಹಿಡಿಯಲಾಗಿದೆ. ಮನೆಯಲ್ಲಿ ಸಾಕುವ ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳಿಗಳೂ ಸಹ ಸೋಂಕಿಗೆ ತುತ್ತಾಗುವ ಸಂಭವವಿರುತ್ತದೆ. ಈ ಕಾಯಿಲೆಯು 2001 ರಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿ ಗ್ರಾಮದಲ್ಲಿ ಈ ಮೊದಲು ಕಾಣಿಸಿಕೊಂಡಿತ್ತು.
2018 ರಲ್ಲಿ ಕೇರಳದಲ್ಲಿ 14 ಖಚಿತ ನಿಫಾ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 11 ಸಾವುಗಳು ಸಂಭವಿಸಿದ್ದವು. 2021 ಕೇರಳ ರಾಜ್ಯದಲ್ಲಿ ಒಂದು ನಿಫಾ ವೈರಸ್ ರೋಗದ ಪ್ರಕರಣ ವರದಿಯಾಗಿದೆ. ಆ ದಿಸೆಯಲ್ಲಿ 2023 ರಲ್ಲಿ 04 ಸಂಶಯಾಸ್ಪದ ನಿಫಾ ವೈರಸ್ ರೋಗದ ಪ್ರಕರಣಗಳು ಕಂಡುಬಂದಿದೆ. ನಿಪಾ ವೈರಸ್‍ಜ್ವರದ ರೋಗ ಲಕ್ಷಣಗಳು ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ ಬರುವುದು. ಪ್ರಜ್ಞಾಹೀನತೆಗೆ ಒಳಗಾಗುವುದು. ಅತೀಯಾದ ಜ್ವರ ಮೆದುಳಿಗೆ ವ್ಯಾಪಿಸುವುದು. ಮಾತುಗಳಲ್ಲಿ ತೊದಲುವಿಕೆ ಹಾಗೂ ಅಪಸ್ವರದ ಲಕ್ಷಣಗಳು ಕಾಣಿಸಿಕೊಳ್ಳುವುದು. ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು. ಸೊಂಕಿತ ದಿನದಿಂದ 4 ರಿಂದ 18 ದಿನಗಳಲ್ಲಿ ನಿಪಾ ವೈರಸ್ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ನಿಪಾ ವೈರಸ್ ಜ್ವರ ಹರಡುವ ವಿಧಾನ ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ ಹಾಗೂ ಬಾವಲಿಗಳು ಬಿಸಾಡಿದ ಹಣ್ಣು ಹಂಪಲುಗಳನ್ನು ಸೇವಿಸುವುದರ ಮೂಲಕ ಇತರ ಪ್ರಾಣಿಗಳಿಗೆ ಹರಡುತ್ತದೆ. ಸೋಂಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಹರಡುತ್ತದೆ. ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸುವುದರಿಂದ ಮನುಷ್ಯರಿಗೆ ಹರಡುತ್ತದೆ. ಸೋಂಕಿತ ಮನುಷ್ಯನ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಆರೋಗ್ಯವಂತ ಮನುಷ್ಯರಿಗೆ ಹರಡುತ್ತದೆ. ಯಾವುದೇ ರೀತಿಯ ಜ್ವರ ಕಂಡು ಬಂದಲ್ಲಿ ಉದಾಸೀನ ಮಾಡದೇ ಹಾಗೂ ನಿಪಾ ವೈರಸ್ ಲಕ್ಷಣಗಳಿರುವ ಜ್ವರಕಂಡು ಬಂದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುವುದು.
ರೋಗಿಗಳ ಜೊತೆ ಕಾರ್ಯನಿರ್ವಹಿಸುವ ಸಿಬ್ಬಂದಿ ಮಾಸ್ಕ್, ಕೈಕವಚ ಧರಿಸುವುದು ಮುಂತಾದ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚು ಗಮನ ಕೊಡುವುದು. ಯಾವುದೇ ಪ್ರಾಣಿ ಪಕ್ಷಿಗಳು ಕಚ್ಚಿದ ಹಾಗೂ ಮಳೆ ಗಾಳಿಯಿಂದ ಬಿದ್ದಿರುವ ಹಣ್ಣುಗಳನ್ನು ಸೇವಿಸಬಾರದು. ಬೀದಿ ಬದಿಗಳಲ್ಲಿ ಕತ್ತರಿಸಿ ಮಾರುವ ಹಣ್ಣು ಹಂಪಲುಗಳನ್ನು ಸೇವಿಸಬಾರದು. ಸರಿಯಾಗಿ ಕೈ ಕಾಲುಗಳನ್ನು ಸೋಪಿನಿಂದ ತೊಳೆಯುವುದು. ಶುಚಿಗೊಳಿಸದ ಕೈಗಳಿಂದ ಕಣ್ಣು ಮತ್ತು ಮೂಗುಗಳನ್ನು ಉಜ್ಜಬಾರದು. ಕಚ್ಚಾ ಖರ್ಜೂರಗಳನ್ನು ಸೇವಿಸದಿರುವುದು. ಸಂಸ್ಕರಿಸಿಲ್ಲದೇ ಯಾವುದೇ ‘ಡ್ರೈ ಪ್ರೂಟ್’ ಗಳನ್ನು ಉಪಯೋಗಿಸದಿರುವುದು.
ಹಂದಿ ಸಾಕಾಣಿಕಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಯಾವುದೇ ರೀತಿಯ ಗಾಯ ಅಥವಾ ಸೊಂಕಿಗೆ ಒಳಗಾಗಿದ್ದಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡುವುದು. ಸೊಂಕಿತ ಮತ್ತು ಕಾಯಿಲೆಯ ಹಂದಿಗಳನ್ನು ನೇರ ಸಂಪರ್ಕಿಸದಿರುವುದು. ಬಾವಲಿಗಳ ಹೆಚ್ಚಿರುವ ಪ್ರದೇಶಗಳಲ್ಲಿ ಸಂಗ್ರಹಣೆ ಮಾಡುವ ಶೇಂದಿ ಮತ್ತು ಪಾನೀಯಗಳನ್ನು ಸೇವಿಸದಿರುವುದು. ಬಾವಲಿಗಳು ಹೆಚ್ಚಿರುವ ಪ್ರದೇಶಗಳಲ್ಲಿರುವ ತೆರೆದ ಬಾವಿಯ ನೀರನ್ನು ಶುದ್ದೀಕರಿಸಿ ಸೇವಿಸುವುದು ಹಾಗೂ ಬಾವಿಗಳನ್ನು ಬಲೆಗಳಿಂದ ಮುಚ್ಚಿ ಬಾವಲಿಗಳು ಒಳ ಪ್ರವೇಶಿಸದಂತೆ ನೋಡಿಕೊಳ್ಳುವುದು.
ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ದುರಹಂಕಾರದ ಮಾತುಗಳನ್ನಾಡುತ್ತಿದೆ: ಅಶ್ವತ್ಥನಾರಾಯಣ
ಕೊಡಗು ಜಿಲ್ಲೆಯ ನೆರೆರಾಜ್ಯ ಕೇರಳಕ್ಕೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ತೀವ್ರಾ ನಿಗಾವಣೆ ಮತ್ತು ಸಕ್ರಿಯ ಸಮೀಕ್ಷೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಈ ವೈರಸ್‍ಜ್ವರವು ನೇರ ಸಂಪರ್ಕದಿಂದ ಹರಡುವುದರಿಂದ ಸೊಂಕಿತ ವ್ಯಕ್ತಿ ಮತ್ತು ಪ್ರಾಣಿಗಳಿಂದ (ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳು) ದೂರವಿರುವುದು ಸೂಕ್ತವಾಗಿದೆ. ಅಲ್ಲದೆ ಸಾರ್ವಜನಿಕರು ಅತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ ಎಂದು ಡಿಎಚ್ಓ ಸತೀಶ್ ಕುಮಾರ್ ತಿಳಿಸಿದ್ದಾರೆ.