ಸದ್ಯಕ್ಕೆ ರಾಜಕೀಯ ನಿವೃತ್ತಿ ಪಡೆಯಲ್ಲ : ಕೈ ನಾಯಕ
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಶಾಸಕರನ್ನು ಪ್ರತಿಷ್ಠಾಪಿಸುವವರೆಗೂ ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪ್ರತಿಜ್ಞೆ ಮಾಡಿದರು.
ಕೆ.ಆರ್.ಪೇಟೆ (ಜ.04): ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಶಾಸಕರನ್ನು ಪ್ರತಿಷ್ಠಾಪಿಸುವವರೆಗೂ ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪ್ರತಿಜ್ಞೆ ಮಾಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ತಾಲೂಕು ಪರಿಶಿಷ್ಟಜಾತಿ ಮತ್ತು ವರ್ಗಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿ ಹಲವು ವರ್ಷಗಳೇ ಕಳೆದಿವೆ. ಮತ್ತೆ ನಮ್ಮ ಪಕ್ಷದ ಶಾಸಕರನ್ನು ಆಯ್ಕೆ ಮಾಡುವವರೆಗೂ ರಾಜಕೀಯ ನಿವೃತ್ತಿ ಪಡೆಯಲ್ಲ ಎಂದರು.
ಸಚಿವ ಕೆ.ಸಿ.ನಾರಾಯಣಗೌಡ ಹಣಕ್ಕಾಗಿ ತನ್ನ ತನವನ್ನೆ ಮಾರಿಕೊಂಡು ರಾಜಕೀಯ ಅಧಿಕಾರ ನೀಡಿದ ಪಕ್ಷಕ್ಕೆ ದ್ರೋಹ ಬಗೆದವರು. ಅಭಿವೃದ್ಧಿ ಹೆಸರಿನಲ್ಲಿ ಕ್ಷೇತ್ರದಲ್ಲಿ ಸಾರ್ವಜನಿಕರ ಹಣ ಲೂಟಿಯಾಗುತ್ತಿದೆ. ಕ್ಷೇತ್ರದ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದರು.
ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟಜಾತಿ ಮತ್ತು ವರ್ಗಗಳ ಐಕ್ಯತಾ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಶೋಷಿತರ ಪರವಾದ ಪಕ್ಷ. ಕೇಂದ್ರದಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಬಂಡವಾಳಶಾಹಿ ವ್ಯವಸ್ಥೆ ಬಲಿಷ್ಠಗೊಳಿಸುತ್ತಿದೆ. ಶೋಷಿತ ಸಮುದಾಯಗಳ ಸದ್ದಡಗಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಅಂಬೇಡ್ಕರ್ ಸಂವಿಧಾನ ನಾಶವಾಗಲಿದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಮುಖಂಡ ವಿಜಯ ರಾಮೇಗೌಡ ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿಂದು ಕಲುಷಿತ ಸರ್ಕಾರಗಳಿವೆ. ಸಂವಿಧಾನದ ಆಶೋತ್ತರಗಳನ್ನು ಗಾಳಿಗೆ ತೂರಲಾಗುತ್ತಿದೆ. ಬಂಡವಾಳಶಾಹಿಗಳ ಪರವಾಗಿ ನಮ್ಮ ಸರ್ಕಾರಗಳು ಕೆಲಸ ಮಾಡುತ್ತಿವೆ. ದಲಿತರು, ಹಿಂದುಳಿದವರು ಮತ್ತು ಶೋಷಿತರನ್ನು ಕಡೆಗಣಿಸಲಾಗುತ್ತಿದೆ. ಶೋಷಿತರ ಪರವಾದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವಂತೆ ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟಪಂಗಡ ಘಟಕದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ನಮ್ಮಲ್ಲಿನ ಒಗ್ಗಟ್ಟು ನಾಶವಾದ ಪರಿಣಾಮ ಬಿಜೆಪಿ ಸರ್ಕಾರ ನಮ್ಮೆಲ್ಲರ ಬದುಕಿನ ನೆಮ್ಮದಿ ಕಸಿಯುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಕ್ಕಿರುವ ರಾಜಕೀಯ ಅಧಿಕಾರಕ್ಕೆ ನಾವೆಲ್ಲ ಶಕ್ತಿ ನೀಡಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರುವ ಮೂಲಕ ನಮ್ಮ ಹಕ್ಕುಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂದರು.
ಪುರಸಭಾ ಸದಸ್ಯ ಡಿ.ಪ್ರೇಂಕುಮಾರ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ನಿರ್ನಾಮವಾದರೆ ದಲಿತರಿಗೆ ಹಳೆಯ ಕಾಲದಲ್ಲಿದ್ದ ಮುಂದೆ ಕಂಠ, ಹಿಂದೆ ಬರಲು ಬದುಕು ಮರುಕಳಿಸಲಿದೆ. ಬಿಜೆಪಿ ಬಲಿಷ್ಠವಾದರೆ ದೇಶದಲ್ಲಿ ಮತ್ತೆ ಜೀತದ ಸಂಸ್ಕೃತಿ ಬರಲಿದೆ ಎಂದು ಎಚ್ಚರಿಸಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ತಾಪಂ ಮಾಜಿ ಸದಸ್ಯ ಮಾಧವ ಪ್ರಸಾದ್, ಮುಖಂಡರಾದ ಬಸ್ತಿ ರಂಗಪ್ಪ, ಸ್ವಾಮಿನಾಯಕ್, ರಾಜಯ್ಯ, ಶಿವಣ್ಣ, ಪಿಎಲ…ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದರಾಜು ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.
ಕಾಂಗ್ರೆಸ್‌ನಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸ
ಮಂಡ್ಯ (ಜ. 04): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮಂಡ್ಯ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದು ಡಾ.ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಶಾಸಕನಾಗಿ ಆಯ್ಕೆಯಾದರೆ ಕ್ಷೇತ್ರದ ಜನತೆಗೆ ಉಚಿತ ಶಿಕ್ಷಣ ಹಾಗೂ ಉಚಿತ ಆರೋಗ್ಯ ಒದಗಿಸಲು ಬದ್ಧನಾಗಿದ್ದೇನೆ ಎಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ತಿಳಿಸಿದರು.
ಪ್ರತಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದಲ್ಲಿ ಸ್ವಂತ ಹಣದಲ್ಲಿ ಶಾಲೆ ತೆರೆದು ಕ್ಷೇತ್ರದ 24 ಗ್ರಾಮ ಪಂಚಾಯ್ತಿಯಿಂದ ತಲಾ 50 ರಿಂದ 100 ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜೊತೆಗೆ ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯುತ್ತೇನೆ ಎಂದರು.
ಕ್ಷೇತ್ರದಲ್ಲಿ ಆರೋಗ್ಯ ಸಮಸ್ಯೆ ತೀವ್ರವಾಗಿದ್ದು, ನನ್ನ ಒಡೆತನ ಖಾಸಗಿ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುತ್ತೇನೆ. ಹೆಚ್ಚಿನ ಚಿಕಿತ್ಸೆ ಅಗತ್ಯಬಿದ್ದರೆ ಅಂತವರನ್ನು ಸ್ವಂತ ಹಣದಲ್ಲಿ ಬೆಂಗಳೂರು-ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿಕೊಡುವುದಾಗಿ ಹೇಳಿದರು.
ಪಕ್ಷೇತರ ಸ್ಪರ್ಧೆ ಇಲ್ಲ:
ಒಂದು ವೇಳೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಇಲ್ಲ. ಹೈ ಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗೂಡಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ. ಟಿಕೆಟ್ ಸಿಗದಿದ್ದರೂ ಜನ ಸೇವೆ ಮುಂದುವರೆಸುತ್ತೇನೆ ಎಂದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ನಮ್ಮಲ್ಲಿ ಒಡಕು ಉಂಟಾದರೆ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಕಷ್ಟ. ಹಾಗಾಗಿ ಎಲ್ಲರೂ ಒಗ್ಗೂಡಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಅಭಿವೃದ್ಧಿಯಲ್ಲಿ ಹಿನ್ನಡೆ:
ಮಂಡ್ಯ ವಿಧಾನಸಭಾ ಕ್ಷೇತ್ರ ತುಂಬಾ ಹಿಂದುಳಿದಿದೆ. ನನ್ನದೇ ಆದ ರೀತಿಯಲ್ಲಿ ಕ್ಷೇತ್ರ ಅಭಿವೃದ್ಧಿ ಮಾಡುವ ಉದ್ದೇಶವಿದೆ. ನಿರುದ್ಯೋಗ, ಬಡತನ ಹಾಸುಹೊಕ್ಕಾಗಿದೆ. ನಿರುದ್ಯೋಗ ನಿವಾರಣೆಗೆ ಹೊಸಹಳ್ಳಿ, ಉಮ್ಮಡಹಳ್ಳಿ, ಕಲ್ಲಹಳ್ಳಿ, ಚಿಕ್ಕಮಂಡ್ಯ ಭಾಗಗಳಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವ ಉದ್ದೇಶ ಹೊಂದಿದ್ದೇನೆ ಎಂದರು.