ಬೆಳಗಾವಿ[ಡಿ.14]: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪಿಯ ತಂದೆ ವಿರುದ್ಧ ಅಪಹರಣ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ಶುಕ್ರವಾರ ಜಿಲ್ಲಾಸ್ಪತ್ರೆಗೆ ಮುತ್ತಿಗೆ ಹಾಕಿದರು. 

ನಂತರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಿದರು. ಮುಗ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪಿ ಸುನೀಲ ಬಾಳು ಬಾಳನಾಯಕಗೆ ಗಲ್ಲು ಶಿಕ್ಷೆ ವಿಧಿಸಬೇಕು. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಿ ತಂದೆ ಬಾಳು ವಿರುದ್ಧವೂ ಅಪಹರಣ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಎಪಿಎಂಸಿ ಪೊಲೀಸ್ ಠಾಣೆಗೆ ತೆರಳಿದ ಪ್ರತಿಭಟನಾಕಾರರು, ಬಾಲಕಿಯನ್ನು ಆಟವಾಡಿಸಲು ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಸಂತ್ರಸ್ತ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ ತಂದೆ ಬಾಳು ಬಾಳನಾಯಕ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕಿಯನ್ನು ಎತ್ತಿಕೊಂಡು ಹೋಗಿದ್ದ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಾಲಕಿಯನ್ನು ಆಕೆಯ ತಂದೆ- ತಾಯಿಗೆ ಒಪ್ಪಿಸಿದ್ದಾನೆ. ಹಾಗಾಗಿ, ತಂದೆಯ ವಿರುದ್ಧ ಸ್ವಯಂ ಪ್ರೇರಿತರಾಗಿ ಅಪಹರಣ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮನವಿ ಮಾಡಿದರು. 

ಆರೋಪಿ ತಂದೆಯಿಂದ ಬಾಲಕಿ ಅಪಹರಣ: 

ಬಳಿಕ ಎಪಿಎಂಸಿ ಪೊಲೀಸ್ ಠಾಣೆಯಿಂದ ಬೃಹತ್ ಪ್ರತಿಭಟನಾ  ರ್ಯಾಲಿ ಮೂಲಕ ಜಿಲ್ಲಾಸ್ಪತ್ರೆಗೆ ಆಗಮಿಸಿದ ಗ್ರಾಮಸ್ಥರು, ಜಿಲ್ಲಾಸ್ಪತ್ರೆಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯ ಅಧಿಕಾರಿಗಳು ಆರೋಪಿಯ ತಂದೆ ಬಂದು ಮಗುವನ್ನು ಎತ್ತಿಕೊಂಡು ಹೋದ ವಿಷಯ ವನ್ನು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ ನಾವು ಯಾವುದೇ ಕಾರಣಕ್ಕೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಆಸ್ಪತ್ರೆಯ ಅಧಿಕಾರಿಗಳು ಆಗಮಿಸಿ, ಅತ್ಯಾಚಾರ ಆರೋಪಿಯ ತಂದೆ ಬಾಲಕಿಯನ್ನು ಎತ್ತಿಕೊಂಡು ಹೋಗಿರುವ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾ ಮೆರಾದಲ್ಲಿ ಸೆರೆಯಾಗಿವೆ ಎಂದು ಸ್ಪಷ್ಟೀಕರಣ ನೀಡಿದ್ದರಿಂದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದರು. 

ಇದಾದ ನಂತರ ಜಿಲ್ಲಾಸ್ಪತ್ರೆಯಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ತ್ವರಿತಗತಿ ನ್ಯಾಯಾಲಯದಲ್ಲಿ ಈ ಪ್ರಕರಣ ವಿಚಾರಣೆ ನಡೆಸಬೇಕು. ನಿರ್ಭಯಾ ಪ್ರಕರಣದ ಬಳಿಕ ರಚಿಸಲಾಗಿರುವ ಮಾರ್ಗಸೂಚಿ ಯಂತೆಯೇ ಪೊಲೀಸರು ಮಗು ಇದ್ದಲ್ಲಿಯೇ ಬಂದು ವಿಚಾರಣೆ ನಡೆಸಬೇಕು ಹಾಗೂ ನಿರ್ಭಯಾ ನಿಧಿ ಅಡಿಯಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕಡೋಲಿ ಗ್ರಾಮಸ್ಥರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.

ಕಡೋಲಿ ಬಂದ್ ಯಶಸ್ವಿ

ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಗ್ರಾಮಸ್ಥರು ಕರೆ ನೀಡಿದ್ದ ಕಡೋಲಿ ಬಂದ್ ಬಹುತೇಕ ಯಶಸ್ವಿಯಾಯಿತು. ಗ್ರಾಮದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಎಂದಿನಂತೆ ಸಾರಿಗೆ ಸಂಚಾರ ವ್ಯವಸ್ಥೆ ಇತ್ತು. ಸ್ವಯಂಪ್ರೇರಿತರಾಗಿ ಗ್ರಾಮಸ್ಥರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದರು. ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕ ಸುನೀಲ ಬಾಳನಾಯಕಗೆ ಗಲ್ಲು ಶಿಕ್ಷೆ ವಿಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು. ಇಡೀ ಗ್ರಾಮಸ್ಥರೇ ಪ್ರತಿಭಟನೆಗೆ ಬೆಳಗಾವಿಗೆ ಆಗಮಿಸಿದ್ದರಿಂದ ಗ್ರಾಮದಲ್ಲಿ ಜನಜಂಗುಳಿ ಇಲ್ಲದೇ ಬಿಕೋ ಎನ್ನುತ್ತಿತ್ತು. ಅತ್ಯಾಚಾರವೆಸಗಿದ ಆರೋಪಿಯ ಮನೆ ಮುಂದೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.