ಬೆಂಗಳೂರು :  ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುತ್ತಿದೆ. ಬುಧವಾರ ಮತ್ತು ಗುರುವಾರವೂ ಮುಂದುವರೆಯುವ ಸಾಧ್ಯತೆಗಳಿವೆ. ಆದರೆ, ವ್ಯಾಪಕವಾಗಿ ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ. ಬದಲಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಮಂಗಳವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಕೆಲವೆಡೆ ಮಳೆಯಾಗಿದೆ. ಇದರಿಂದ ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾದ ವರದಿಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ತಿಳಿಸಿದ್ದಾರೆ.

ಬಿಸಿಲು ಕಡಿಮೆ ಆಗಲ್ಲ:

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಉಷ್ಣಾಂಶ ವಾಡಿಕೆಗಿಂತ 1ರಿಂದ 3 ಡಿಗ್ರಿ ಸೆಲ್ಷಿಯಸ್‌ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರಲಿದ್ದು, ಜೂನ್‌ ಆರಂಭದಲ್ಲಿ ಮುಂಗಾರು ರಾಜ್ಯ ಪ್ರವೇಶಿಸಿದ ಬಳಿಕ ಕಡಿಮೆಯಾಗಲಿದೆ. ಅಲ್ಲಿಯವರೆಗೆ ಹೆಚ್ಚಿನ ಪ್ರಮಾಣದ ತಾಪ ಮುಂದುವರೆಯಲಿದೆ. ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಉಷ್ಣಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.