ಬೆಳಗಾವಿ(ಸೆ.26): ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. 

ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರು ಮತ್ತು‌ ಕಾರ್ಯಕರ್ತರೊಂದಿಗೆ ಸಭೆ‌ ನಡೆಸಿ ಬಿಜೆಪಿ ಪಕ್ಷ ಸೇರುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಮೇಶ್ ಜಾರಕಿಹೊಳಿ ಅವರು ನಿನ್ನೆಯಷ್ಟೆ ದೆಹಲಿಯಿಂದ ಗೋಕಾಕ್ ಆಗಮಿಸಿದ್ದು ,ಇಂದು ತಮ್ಮ ಬೆಂಬಲಿಗರು ಮತ್ತು‌ ಕಾರ್ಯಕರ್ತರೊಂದಿಗೆ ಸಭೆ‌ ನಡೆಸಿ ಬಿಜೆಪಿ ಸೇರ್ಪಡೆ ಮತ್ತು ನಾಮಪತ್ರ ಸಲ್ಲಿಕೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 

ಸುಪ್ರೀಂ ತೀರ್ಪಿಗಾಗಿ ಕಾಯುತ್ತಿರುವ ರಮೇಶ್

ಸುಪ್ರೀಂಕೋರ್ಟ್ ತೀರ್ಪು ಅನರ್ಹರ ಪರವಾಗಿ ಬಂದರೆ ರಮೇಶ್ ಜಾರಕಿಹೊಳಿ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ, ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿಯ ಪ್ರಮುಖ ಮುಖಂಡರು ಭಾಗಿ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರ ನಿವಾಸ ಮನೆ ಮುಂದೆ ಬೆಂಬಲಿಗರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ. 

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.