ಇ-ಶ್ರಮ್‌ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿ: ಸಿಇಒ

ಅಸಂಘಟಿತ ಕಾರ್ಮಿಕರು ತಪ್ಪದೇ ಇ-ಶ್ರಮ್‌ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು.

Register name on e-shram portal CEO snr

  ತುಮಕೂರು :  ಅಸಂಘಟಿತ ಕಾರ್ಮಿಕರು ತಪ್ಪದೇ ಇ-ಶ್ರಮ್‌ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು.

ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಸಹಯೋಗದಲ್ಲಿ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರಿಗೆ ವಿವಿಧ ಯೋಜನೆ ಸೌಲಭ್ಯಗಳ ವಿತರಣೆ ಹಾಗೂ ಇ-ಶ್ರಮ್‌ ನೋಂದಣಿ ಪ್ರಚಾರ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಅಸಂಘಟಿತ ಕಾರ್ಮಿಕರು ಇ-ಶ್ರಮ್‌ ಪೋರ್ಟಲ್‌ಗೆ ಹೆಸರು ನೋಂದಾಯಿಸುವುದರೊಂದಿಗೆ ಈವರೆಗೂ ನೋಂದಾಯಿಸಿಕೊಳ್ಳದೇ ಇರುವ ಕಾರ್ಮಿಕರಿಗೂ ನೋಂದಾಯಿಸಿಕೊಳ್ಳುವ ಬಗ್ಗೆ ಮಾಹಿತಿ ತಿಳಿಸಬೇಕು. ಕಟ್ಟಡ ಕಾರ್ಮಿಕರ ಮುಖಂಡರು ತಮ್ಮ ವ್ಯಾಪ್ತಿಯಲ್ಲಿರುವ ಕಾರ್ಮಿಕರಿಗೆ ಇ-ಶ್ರಮ್‌ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಅರಿವು ಮೂಡಿಸಬೇಕು. ಹೆಸರು ನೋಂದಾಯಿಸಿಕೊಂಡವರಿಗೆ ಇಲಾಖೆಯಿಂದ ಗುರುತಿನ ಚೀಟಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ವಿವಿಧ ಸರ್ಕಾರಿ ಸೌಲಭ್ಯ ಪಡೆಯಲು ಇ-ಶ್ರಮ್‌ ಗುರುತಿನ ಚೀಟಿಯನ್ನೇ ಅವಲಂಬಿಸುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.

ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ವೈದ್ಯಕೀಯ ಸೌಲಭ್ಯ, ವಿಮಾ ಸೌಲಭ್ಯ ನೀಡುತ್ತಿದ್ದು, ಇದರ ಪ್ರಯೋಜನ ಪಡೆಯಬೇಕು. ಕೋವಿಡ್‌ ನಂತರ ಸರ್ಕಾರವು ಅಸಂಘಟಿತ ಕಾರ್ಮಿಕರಿಗೆ ವಾರ್ಷಿಕ 2000 ರು.ಗಳ ನೀಡುವ ಸೌಲಭ್ಯ ಒದಗಿಸಿದ್ದು, ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್‌.ಎನ್‌. ರಮೇಶ್‌ ಮಾತನಾಡಿ, ಕೋವಿಡ್‌ ಸಂದರ್ಭದಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಬಹಳಷ್ಟುಅಸಂಘಟಿತ ಕಾರ್ಮಿಕರನ್ನು ಪತ್ತೆ ಹಚ್ಚಲಾಗದೆ ಸರ್ಕಾರದ ಸೌಲಭ್ಯ ತಲುಪಿಸಲು ಸಾಧ್ಯವಾಗಲಿಲ್ಲ. ಇದನ್ನು ಮನಗಂಡ ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸಲು ವಿಶೇಷವಾಗಿ ಇ-ಶ್ರಮ್‌ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದೆ. ಕಳೆದ ವರ್ಷದಿಂದ ಎಲ್‌ಕೆಜಿ ತರಗತಿಯಿಂದ ಪಿಎಚ್‌ಡಿವರೆಗೂ ವ್ಯಾಸಂಗ ಮಾಡುವ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಸೌಲಭ್ಯವನ್ನು ಜಾರಿಗೆ ತರಲಾಗಿದೆ. ಪ್ರಸಕ್ತ ವರ್ಷದಿಂದ ಕಟ್ಟಡ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಫಲಾನುಭವಿಗಳು ಈ ಕಿಟ್‌ ಸೌಲಭ್ಯವನ್ನು ಪಡೆಯಬೇಕೆಂದು ಮನವಿ ಮಾಡಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ರವಿಶಂಕರ್‌ ಮಾತನಾಡಿ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಕೈಗಾರಿಕೋದ್ಯಮದಲ್ಲಿ ಕೆಲಸ ಮಾಡಲಿಚ್ಛಿಸುವ ಪದವೀಧರರು ಹಾಗೂ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯವನ್ನೂ ಸಹ ಕಲ್ಪಿಸಲಾಗುತ್ತಿದೆ. ಇಂತಹ ತರಬೇತಿ ಪಡೆಯುವುದರಿಂದ ಉದ್ಯೋಗ ಹೊಂದಲು ನೆರವಾಗುತ್ತದೆ. ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಕಾರ್ಮಿಕ ಇಲಾಖೆಯೊಂದಿಗೆ ಕೈಜೋಡಿಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಅಧ್ಯಯನಕ್ಕೆ ಅನುಕೂಲವಾಗುವಂತಹ ಸಾಮಗ್ರಿಗಳ ಕಿಟ್‌ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಂಜಯ್ಯ, ಪಾಲಿಕೆ ಸದಸ್ಯ ಟಿ.ಎಂ. ಮಹೇಶ್‌, ಕಾರ್ಮಿಕ ನಿರೀಕ್ಷಕರಾದ ಡಿ.ಎಂ.ವೆಂಕಟೇಶ್‌ ಬಾಬು, ಅಬ್ದುಲ್‌ ರವೂಫ್‌, ಯೋಜನಾ ನಿರ್ದೇಶಕ ರವಿಕುಮಾರ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಕಾರ್ಮಿಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು

ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದರೊಂದಿಗೆ ಅವರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು. ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಸರ್ಕಾರ ನೀಡಿದ್ದು, ಪ್ರಯೋಜನ ಪಡೆಯಬೇಕು. ಸಾಮಾನ್ಯವಾಗಿ ಗ್ರಾಮೀಣ ಪ್ರದೇಶದ ಕಾರ್ಮಿಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಕಾರ್ಮಿಕರು ಯಾವುದೇ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರೂ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಕೆಲಸಕ್ಕಾಗಿ ದೂರದ ಪ್ರದೇಶಗಳಿಗೆ ಹೋಗುವ ಸಂದರ್ಭದಲ್ಲಿ ಶಾಲೆಗೆ ಕಳುಹಿಸಲು ಸಾಧ್ಯವಾಗದಿದ್ದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಇಲಾಖೆಯಡಿ ನಡೆಯುತ್ತಿರುವ ವಸತಿ ಶಾಲೆಗಳಿಗೆ ದಾಖಲಿಸಬೇಕು ಎಂದು ಸಿಇಒ ಡಾ.ವಿದ್ಯಾಕುಮಾರಿ ಹೇಳಿದರು.

Latest Videos
Follow Us:
Download App:
  • android
  • ios