ದಕ್ಷಿಣ ಕನ್ನಡ ಜಿಲ್ಲೆಯನ್ನು 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಿದೆ. ಆಸಕ್ತರು 30 ದಿನಗಳೊಳಗೆ ಮುಖ್ಯಮಂತ್ರಿ ಸಚಿವಾಲಯ, ಕಂದಾಯ ಇಲಾಖೆ ಅಥವಾ ಜಿಲ್ಲಾಧಿಕಾರಿಗಳಿಗೆ ಲಿಖಿತ ಅಥವಾ ಇ-ಮೇಲ್ ಮೂಲಕ ಸಲಹೆ ಸಲ್ಲಿಸಬಹುದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಕುರಿತು ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮದ ಹಿರಿಯರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಹಲವಾರು ಮನವಿಗಳು ಸರ್ಕಾರದಲ್ಲಿ ಸ್ವೀಕೃತಗೊಂಡಿರುತ್ತವೆ. ಈ ಕುರಿತು ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಗಣನೆಗೆ ತೆಗೆದುಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ಉದ್ದೇಶಿಸಲಾಗಿದೆ.

ಸಾರ್ವಜನಿಕರಿಂದ ಯಾವುದೇ ಸಲಹೆ/ಅಭಿಪ್ರಾಯ

ಭಾರತ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಗಳನ್ವಯ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಸೆಕ್ಷನ್ 4(4A) ರಡಿ ಪ್ರದತ್ತವಾದ ಅಧಿಕಾರದನ್ವಯ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಾರ್ವಜನಿಕರಿಂದ ಯಾವುದೇ ಸಲಹೆ/ಅಭಿಪ್ರಾಯಗಳು ಸ್ವೀಕೃತವಾದಲ್ಲಿ ಅವುಗಳನ್ನು ಪರಿಶೀಲಿಸಲಾಗುತ್ತದೆ.

ಅಭಿಪ್ರಾಯ ಕಳುಹಿಸುವ ವಿಳಾಸ ಈ ರೀತಿಯಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ/ಸಲಹೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದಾಗಿದೆ

1)ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ 235, 2ನೇ ಮಹಡಿ, ವಿಧಾನ ಸೌಧ ಬೆಂಗಳೂರು 560001 - e-mail: cm.kar@nic.in ಅಥವಾ

2)ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 - e-mail: Prs.revenue@gmail.com ಅಥವಾ

3)ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ಪ್ರಜಾಸೌಧ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಪಡೀಲು, ಮಂಗಳೂರು, -575007- e-mail: dc.mnglr@gmail.com ವಿಳಾಸಗಳಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಈ ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.