ಬೆಂಗಳೂರು(ನ.21): ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ್‌ಮೂರ್ತಿ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕೂ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ ಅವರನ್ನು ನಗರದ ಸಿಟಿ ಸಿವಿಲ್‌ ಹಾಗೂ ಸೆಷನ್ಸ್‌ ನ್ಯಾಯಾಲಯ ನ.24ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಸಂಪತ್‌ ರಾಜ್‌ ಬಂಧನ ಬಳಿಕ ಎರಡು ದಿನಗಳ ಕಾಲ ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿ ಅವರನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ 67ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆರೋಪಿಯನ್ನು ನ.24ರ ವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ ಸಂಬಂಧ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ತನಿಖೆ ನಡೆಸುತ್ತಿದ್ದು, ಆರೋಪಿ ಸಂಪತ್‌ರಾಜ್‌ರನ್ನು ಮುಂದಿನ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿಯೇ ವಿಚಾರಣೆಗೆ ಒಳಪಡಿಸಬಹುದು ಎಂದು ಸೂಚಿಸಿದೆ.

ಡಿಜೆ ಹಳ್ಳಿ ಗಲಭೆ: ತಮಿಳುನಾಡಿನಲ್ಲಿ ಸಂಪತ್‌ ರಾಜ್‌ ತೀರ್ಥಯಾತ್ರೆ

ಜಾಮೀನು ಅರ್ಜಿ ಮುಂದಕ್ಕೆ

ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನ.24ಕ್ಕೆ ಮುಂದೂಡಿದೆ. ಅಲ್ಲದೆ, ಅರ್ಜಿಯ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದೆ.

ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ, ಆರೋಪಿ ಸಂಪತ್‌ ರಾಜ್‌ ವಿರುದ್ಧ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಶಾಸಕ ಅಖಂಡ ಶ್ರೀನಿವಾಸ್‌ಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದರು.

ಇದಾದ ಬಳಿಕ ಅನಾರೋಗ್ಯ ಸಮಸ್ಯೆಯಲ್ಲಿ ಆಸ್ಪತ್ರೆ ಸೇರಿದ್ದ ಸಂಪತ್‌ ರಾಜ್‌ ನಂತರ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ತಲೆ ಮರೆಸಿಕೊಂಡಿದ್ದರು. ಈ ನಡುವೆ ಸಂಪತ್‌ ರಾಜ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲಿಯೂ ಜಾಮೀನು ಸಿಕ್ಕಿರಲಿಲ್ಲ. ನಂತರ ಸಿಸಿಬಿ ಪೊಲೀಸರು ಬಂಧಿಸಿದ್ದರು.