ಬೆಂಗಳೂರು(ಫೆ.13): ನಗರದ ಕೆ.ಜೆ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಜಾಮೀನು ಕೋರಿ ಸಂಪತ್‌ ರಾಜ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರು ಈ ಆದೇಶ ಮಾಡಿದರು. ಪ್ರಕರಣ ಕುರಿತ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಈಗಾಗಲೇ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಎರಡು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಬಹುದು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಸಾಕ್ಷ್ಯ ನಾಶ ಪಡಿಸಲು ಯತ್ನಿಸಬಾರದು. ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೂ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಕೋರ್ಟ್‌ ಅನುಮತಿ ಇಲ್ಲದೆ ಬೆಂಗಳೂರು ನಗರ ಬಿಟ್ಟು ತೆರಳುವಂತಿಲ್ಲ ಎಂದು ಜಾಮೀನಿಗೆ ಷರತ್ತು ವಿಧಿಸಿರುವ ಹೈಕೋರ್ಟ್‌, ಒಂದೊಮ್ಮೆ ಆರೋಪಿ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದು ಕೋರಿ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ತಿಳಿಸಿದೆ.

ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

ಕೆ.ಜಿ. ಹಳ್ಳಿ ಮತ್ತು ಡಿ.ಜಿ.ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಮನೆ ಮೇಲೆ ದಾಳಿ ನಡೆಸಲು ತಮ್ಮ ಬೆಂಬಲಿಗರ ಮೂಲಕ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ್ದಾರೆಂಬ ಆರೋಪ ಸಂಪತ್‌ ರಾಜ್‌ ಮೇಲೆ ಕೇಳಿಬಂದಿತ್ತು. ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಂಪತ್‌ ರಾಜ್‌ ಪರಾರಿ ಆಗಿದ್ದರು. ತದ ನಂತರ ನ.16ರಂದು ಸಿಸಿಬಿ ಪೊಲೀಸರು ಅವರನ್ನು ಬಂಧಿಸಿದ್ದರು. ಮೂರು ದಿನ ಪೊಲೀಸ್‌ ಕಸ್ಟಡಿಗೆ ನೀಡಿದ್ದ ವಿಚಾರಣಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 67ನೇ ಸಿಟಿ ಸಿವಿಲ್‌ ಕೋರ್ಟ್‌ ಡಿ.1ರಂದು ತಿರಸ್ಕರಿಸಿತ್ತು. ಹೀಗಾಗಿ, ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಂಗದ ಮೇಲೆ ನಂಬಿಕೆ ಇದೆ: ಸಂಪತ್‌

ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇದೆ. ಈ ನಂಬಿಕೆಯಿಂದಲೇ ನಾನು ಇವತ್ತು ಬಿಡುಗಡೆಯಾಗಿದ್ದೇನೆ. ಮುಂದೆ ಈ ಎಲ್ಲ ಆರೋಪಗಳಿಂದ ಮುಕ್ತನಾಗುತ್ತೇನೆ ಎಂದು ಮಾಜಿ ಮೇಯರ್‌ ಸಂಪತ್‌ ರಾಜ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಷಡ್ಯಂತ್ರದ ಬಗ್ಗೆ ನಾನೇನು ಮಾತನಾಡುವುದಿಲ್ಲ. ಸದ್ಯಕ್ಕೆ ಪ್ರಕರಣ ಕೋರ್ಟ್‌ನಲ್ಲಿ ಇರುವುದರಿಂದ ಹೆಚ್ಚು ಮಾತನಾಡುವುದಿಲ್ಲ. ನಮ್ಮ ರಾಜಕೀಯ ನಾಯಕರನ್ನು ಭೇಟಿಯಾಗುವ ಬಗ್ಗೆ ಮತ್ತು ಮುಂದಿನ ರಾಜಕೀಯದ ಕುರಿತು ಮುಂದೆ ತಿಳಿಸುತ್ತೇನೆ. ನ್ಯಾಯಾಲಯದ ಮೇಲೆ ನಂಬಿಕೆಯಿದ್ದು ನನಗೆ ನ್ಯಾಯ ಸಿಗಲಿದೆ ಎಂದರು.