ಶಿಡ್ಲಘಟ್ಟದಲ್ಲಿ ಫ್ಲೆಕ್ಸ್ ತೆರವು ವಿಚಾರವಾಗಿ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ತಲೆಮರೆಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪ್ರಕರಣವೊಂದರಲ್ಲಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ ಹಾಗೂ ಜನರನ್ನು ದಂಗೆಗೆ ಪ್ರಚೋದಿಸಿ ಬೆಂಕಿ ಹಚ್ಚುವುದಾಗಿ ಧಮಕಿ ನೀಡಿದ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ನಗರಸಭೆ ಆಯುಕ್ತೆ ಅಮೃತಾಗೌಡ ನೀಡಿದ ದೂರಿನ ಮೇರೆಗೆ ಒಂದು ಪ್ರಕರಣ ದಾಖಲಾಗಿದ್ದು, ಮತ್ತೊಂದು ಪ್ರಕರಣವನ್ನು ಜೆಡಿಎಸ್ ಮುಖಂಡನೊಬ್ಬರ ದೂರಿನ ಆಧಾರದಲ್ಲಿ ಪೊಲೀಸರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಪೊಲೀಸರು ಒಟ್ಟು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಎಫ್‌ಐಆರ್ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಪರಾರಿ

ರಾಜೀವ್ ಗೌಡ ವಿರುದ್ಧ ಪ್ರಕರಣಗಳು ದಾಖಲಾಗುತ್ತಿದ್ದಂತೆ ಅವರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯಿಂದ ಅವರ ಫೋನ್ ಸಂಪರ್ಕ ಕಡಿತಗೊಂಡಿದ್ದು, ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ. ರಾಜೀವ್ ಗೌಡ ಬಂಧನಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ತಕ್ಷಣವೇ ರಾಜೀವ್ ಗೌಡ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಆಗಿದ್ದೇನು?: ಫ್ಲೆಕ್ಸ್ ತೆರವು ವಿಚಾರಕ್ಕೆ ಗಲಾಟೆ

ಈ ಘಟನೆಗೆ ಹಿನ್ನೆಲೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ. ಈ ಸಭೆಯ ಸಂದರ್ಭದಲ್ಲಿ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು, ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಜೀವ್ ಗೌಡ, ನಗರಸಭೆ ಆಯುಕ್ತೆ ಅಮೃತಾಗೌಡರಿಗೆ ದೂರವಾಣಿ ಕರೆ ಮಾಡಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾರೆ.

ಜೀವ ಬೆದರಿಕೆ, ದಂಗೆ ಪ್ರಚೋದನೆ ಆರೋಪ

ದೂರು ಪ್ರಕಾರ, ರಾಜೀವ್ ಗೌಡ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆಸುವುದಾಗಿ, ಶಿಡ್ಲಘಟ್ಟದಿಂದ ಅಮೃತಾಗೌಡರನ್ನು ವರ್ಗಾವಣೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಜನರನ್ನು ದಂಗೆಗೆ ಎಬ್ಬಿಸಿ ಬೆಂಕಿ ಹಚ್ಚಿಸುವುದಾಗಿ ಧಮಕಿ ನೀಡಿದ್ದಾರೆ. ಈ ಸಂಬಂಧದ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗೆ ಈ ರೀತಿ ಬೆದರಿಕೆ ಹಾಕಿರುವುದನ್ನು ಖಂಡಿಸಿ ಹಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಪೌರಾಯುಕ್ತೆಯಿಂದ ದೂರು

ಅಶ್ಲೀಲ ನಿಂದನೆ ಹಾಗೂ ಜೀವ ಬೆದರಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೌರಾಯುಕ್ತೆ ಅಮೃತಾಗೌಡ ಶಿಡ್ಲಘಟ್ಟ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಮಹಿಳಾ ಆಯೋಗ ಕೂಡ ಎಂಟ್ರಿ ಕೊಟ್ಟಿದೆ. ಈ ಕೇಸ್ ನಲ್ಲಿ ರಾಜೀವ್ ಗೌಡ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ, ಬಾಗೇಪಲ್ಲಿಯ ಪುರಸಭೆ ಕಚೇರಿ ಎದುರು ಪೌರಕಾರ್ಮಿಕರು ಬುಧವಾರ ಮೌನ ಪ್ರತಿಭಟನೆ ನಡೆಸಿ, ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ರಾಜೀವ್ ಗೌಡ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜೀವ್ ಗೌಡ ಸ್ಪಷ್ಟನೆ

ಈ ನಡುವೆ ಆಡಿಯೋ ವೈರಲ್ ಕುರಿತು ಪ್ರತಿಕ್ರಿಯಿಸಿದ ರಾಜೀವ್ ಗೌಡ, “ಆಡಿಯೋದಲ್ಲಿ ಮಾತನಾಡಿರುವುದು ನಾನೇ. ಆದರೆ ಅಧಿಕಾರಿಯೊಂದಿಗೆ ಕೆಟ್ಟ ರೀತಿಯಲ್ಲಿ ಮಾತನಾಡಿಲ್ಲ. ನನ್ನ ಮಾತಿನಿಂದ ಅಧಿಕಾರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎಂದು ತಿಳಿಸಿದ್ದಾರೆ. ಆದರೆ ಪೊಲೀಸರು ಆಡಿಯೋ ಕ್ಲಿಪ್, ದೂರುಗಳು ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆ ಮುಂದುವರೆಸಿದ್ದಾರೆ. ರಾಜೀವ್ ಗೌಡ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.