ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ರೌಡಿ ಅಬ್ಬರ ಮತ್ತೆ ಮುನ್ನೆಲೆಗೆ ಬಂದಿದೆ. ನಗರದ ಸೀಗೆಹಟ್ಟಿಯ ನಿವಾಸಿ, ರೌಡಿಶೀಟರ್ ಕುಳ್ಳಿ ಕಿರಣ (32) ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದೆ. ಅಷ್ಟಕ್ಕೂ ಆಗಿದ್ದೇನು?

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ರೌಡಿ ಅಬ್ಬರ ಮತ್ತೆ ಮುನ್ನೆಲೆಗೆ ಬಂದಿದೆ. ನಗರದ ಸೀಗೆಹಟ್ಟಿಯ ನಿವಾಸಿ, ರೌಡಿಶೀಟರ್ ಕುಳ್ಳಿ ಕಿರಣ (32) ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದೆ.

ಶಿವಮೊಗ್ಗದ ಹೊರವಲಯದ ರಾಮಿನಕೊಪ್ಪದ ಬಳಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಜಾಗದಲ್ಲಿ ಈ ಘಟನೆ ಸಂಭವಿಸಿದೆ. ಕಿರಣ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಅಲ್ಲಿಗೆ ನುಗ್ಗಿದ 2 ರಿಂದ 3 ಜನರ ಗುಂಪು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಕಿರಣನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಮಾರ್ಗಮಧ್ಯದಲ್ಲಿಯೇ ಆತ ಕೊನೆಯುಸಿರೆಳೆದಿದ್ದಾನೆ.

ಹಣಕಾಸಿನ ವಿಚಾರವೇ ಕೊಲೆಗೆ ಕಾರಣ?

ಪ್ರಾಥಮಿಕ ತನಿಖೆಯ ಪ್ರಕಾರ..ಖಾಸಗಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಇಸ್ಪೀಟ್ ಆಟದ ವೇಳೆ ನಡೆದ ಕ್ಷಣಿಕ ಜಗಳವೋ ಅಥವಾ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹೊಂಚು ಹಾಕಿ ಈ ಕೊಲೆ ಮಾಡಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಎಸ್ಪಿ ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ನಗರದಲ್ಲಿ ರೌಡಿಶೀಟರ್ ಹತ್ಯೆಯಿಂದಾಗಿ ಸೀಗೆಹಟ್ಟಿ ಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.