ಶಿವಮೊಗ್ಗ(ಜು.12): ಆಪರೇಷನ್‌ ಕಮಲ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನುಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾ ಜೆಡಿಎಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಜಿಲ್ಲಾ ಘಟಕದಿಂದ ನಗರದ ಗಾಂಧಿ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮತ ಹೊಂದಿರುವ ಪಕ್ಷ ಸರ್ಕಾರ ನಡೆಸುವುದಕ್ಕೆ ಅವಕಾಶವಿದೆ. ಅಂತೆಯೇ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಆಡಳಿತ ನಡೆಯುತ್ತಿದೆ. ಆದರೆ ಬಿಜೆಪಿ ಕಾಂಗ್ರೆಸ್‌-ಜೆಡಿಎಸ್‌ ಶಾಸಕರಿಗೆ ಆಮಿಷವೊಡ್ಡಿ ಜನಪರ ಸರ್ಕಾರವನ್ನು ಅಸ್ಥಿತಗೊಳಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಆದರೆ ಅಧಿಕಾರದ ಆಸೆಗೆ ಬಿದ್ದಿರುವ ಬಿಜೆಪಿ ಮೈತ್ರಿ ಸರ್ಕಾರಕ್ಕೆ ಇನ್ನಿಲ್ಲದ ರೀತಿಯಲ್ಲಿ ತೊಂದರೆ ನೀಡುತ್ತಿದೆ. ಇದೀಗ ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ಖರೀದಿಗೆ ಪ್ರಯತ್ನಿಸುತ್ತಿದೆ. ಸಂವಿಧಾನದ ಆಶಯ ಬಿಜೆಪಿ ಸಂಪೂರ್ಣ ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಪೀಕರ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

2008ರಲ್ಲಿ ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಆಪರೇಷನ್‌ ಕಮಲ ನಡೆಸಿದ್ದರು. ಇಂದು ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಷ್ಟ್ರವ್ಯಾಪಿ ಆಪರೇಷನ್‌ ಕಮಲ ನಡೆಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳ ಸರ್ಕಾರವನ್ನು ಅಸ್ಥಿರಗೊಳಿಸುವ ಮೂಲಕ ಪಕ್ಷಗಳನ್ನೇ ಮುಗಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಜನಪರ ಸರ್ಕಾರವನ್ನು ಅಸ್ಥಿರಗೊಳಿಲು ಯಾವುದೇ ಕಾರಣಕ್ಕೂ ಮುಂದಾಗಬಾರದು, ಜನತಂತ್ರ ವ್ಯವಸ್ಥೆಯ ಮೌಲ್ಯ ಕಾಪಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ನಾಗರಾಜ್‌ ಕಂಕಾರಿ, ಎಚ್‌. ಪಾಲಾಕ್ಷಿ, ಮಂಜುನಾಥ್‌, ಏಳುಮಲೈ, ಎನ್‌.ಎಸ್‌. ಆನಂದ್‌, ಶಾಂತಾ ಸುರೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.