Asianet Suvarna News Asianet Suvarna News

ತುಮಕೂರು: ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ, ಪುನೀತರಾದ ಭಕ್ತರು

ತುಮಕೂರಿನಲ್ಲಿ ಸಂಭ್ರಮದ ಸಿದ್ಧಲಿಂಗೇಶ್ವರ ಸ್ವಾಮಿ ರಥೋತ್ಸವ| ರಥದ ಗಾಲಿಗೆ ತೆಂಗಿಯ ಕಾಯಿ ಒಡೆದು ಪುಷ್ಪಾರ್ಚನೆ ಸಲ್ಲಿಸಿ ಸಿದ್ಧಲಿಂಗ ಸ್ವಾಮೀಜಿ ಚಾಲನೆ|ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ವಿತರಣೆ|

Siddhalingeshwara Fair Was Held in Tumakuru
Author
Bengaluru, First Published Feb 23, 2020, 10:11 AM IST

ತುಮಕೂರು(ಫೆ.23): ಇತಿಹಾಸ ಪ್ರಸಿದ್ಧ ಸಿದ್ಧಗಂಗೆಯಲ್ಲಿ ಶನಿವಾರ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು.

ಶ್ರೀಕ್ಷೇತ್ರ ಸಿದ್ಧಗಂಗೆಯ ಆರಾಧ್ಯದೈವ ಸಿದ್ಧಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಸೇರಿದಂತೆ ವಿವಿಧ ಮಠಾಧೀಶರು ಸೇರಿದಂತೆ ಅನೇಕ ಗಣ್ಯರು, ಭಕ್ತಾದಿಗಳು ಭಾಗವಹಿಸಿದ್ದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇದಕ್ಕೂ ಮುನ್ನ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಕಚೇರಿ ಮುಂಭಾಗದಿಂದ ವೀರಗಾಸೆ, ನಂದಿಧ್ವಜ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಿ ರಥ ಪ್ರದಕ್ಷಿಣೆ ಹಾಕಿ ರಥಕ್ಕೆ ಶ್ರೀ ಸಿದ್ಧಲಿಂಗೇಶ್ವರಸ್ವಾಮಿಯನ್ನು ಕೂರಿಸಲಾಯಿತು. ನಂತರ ರಾಜಯೋಗ 12 ಗಂಟೆಗೆ ಸರಿಯಾಗಿ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.

ಸುವರ್ಣ ಕಳಶಗಳಿಂದ ಅಲಂಕಾರ

ರಥವನ್ನು ಅಭೂತಪೂರ್ಣ ವಸ್ತ್ರಗಳಿಂದ ಸುವರ್ಣ ಕಳಶಗಳಿಂದ ಧಾರ್ಮಿಕ ಲಾಂಛನಗಳಾದ ಮಕರ, ತೋರಣ, ಕಲಶ, ಕನ್ನಡಿ ವಿವಿಧ ಬಗೆಯ ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.

ರಥ ಸಾಗಿದ ದಾರಿಯುದ್ದಕ್ಕೂ ನಂದಿಧ್ವಜ, ಕರಡಿ ಮಜಲು, ನಾಗಸ್ವರ, ವೀರಗಾಸೆ, ಪಟಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೆರೆದಿದ್ದ ಭಕ್ತ ಸಮೂಹವನ್ನು ಆಕರ್ಷಿಸಿದವು.

ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸುಡು ಬಿಸಿಲನ್ನೂ ಲೆಕ್ಕಿಸದೆ ರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಬಾಳೆಹಣ್ಣು, ಹೂವು, ದವನ ಎಸೆದು ಭಕ್ತಿ ಸಮರ್ಪಿಸಿದರು.

ಭಕ್ತರ ದಂಡು:

ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು, ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಶ್ರೀಕ್ಷೇತ್ರದಲ್ಲಿ ಶನಿವಾರ ಸುಡುವ ಬಿಸಿಲನ್ನೂ ಲೆಕ್ಕಿಸದೆ ಭಕ್ತಾದಿಗಳು ಶ್ರೀಮಠದ ಶಾಲಾ ಕಟ್ಟಡಗಳ ಮೇಲೆ ಹತ್ತಿ ರಥೋತ್ಸವವನ್ನು ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ರಥೋತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಹಲವು ಸಂಘ ಸಂಸ್ಥೆಗಳಿಂದ ಪಾನಕ, ಮಜ್ಜಿಗೆಯನ್ನು ವಿತರಿಸಲಾಯಿತು. ರಥೋತ್ಸವದಲ್ಲಿ ನಾಡಿನ ವಿವಿಧೆಡೆಯಿಂದ ಪಾಲ್ಗೊಂಡಿದ್ದ ಸಹಸ್ರಾರು ಮಂದಿ ಭಕ್ತಾದಿಗಳಿಗೆ ವಿಶೇಷ ಪ್ರಸಾದ, ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

Follow Us:
Download App:
  • android
  • ios