Asianet Suvarna News Asianet Suvarna News

ಶಿರಸಿ: ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ವಿಶ್ವದಾಖಲೆಯ ಪಟ್ಟಿಗೆ ಸೇರ್ಪಡೆ

ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್‌ ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದಿಂದ ವಿಶ್ವಶಾಂತಿಗೆ ಈವರೆಗೆ ೯ ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.

Sirsi Origin Tulsi Hegade Added to the World Record List grg
Author
First Published Jul 3, 2024, 11:33 AM IST

ಶಿರಸಿ(ಜು.03):  ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಶ್ವಶಾಂತಿಗೆ ಯಕ್ಷ ನೃತ್ಯ ಮೂಲಕ ಕೊಡುಗೆ ನೀಡುತ್ತಿರುವ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ ದಾಖಲಾಗಿದೆ. ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್‌ ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದಿಂದ ವಿಶ್ವಶಾಂತಿಗೆ ಈವರೆಗೆ ೯ ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.

ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತುಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ. ಈ ದಾಖಲೆಗೆ ತುಳಸಿ ಹೆಗಡೆ ಹೆಸರು ಸೇರ್ಪಡೆಯಿಂದ ಯಕ್ಷ ರೂಪಕದ ಮೂಲಕ ಯಕ್ಷಗಾನದ ಹೆಸರೂ ಇದೇ ಪ್ರಥಮ ಬಾರಿಗೆ ಸೇರಿದಂತಾಗಿದೆ.

ಹುಬ್ಬಳ್ಳಿ ಯುವತಿ ಶೃತಿ ಹೆಗಡೆಗೆ ಮಿನಿ ವಿಶ್ವಸುಂದರಿ ಕಿರೀಟ..!

ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ೧೦ನೇ ತರಗತಿ ಓದುತ್ತಿರುವ ತುಳಸಿ ಹೆಗಡೆ ತನ್ನ ಮೂರು ವರ್ಷದಿಂದಲೇ ಯಕ್ಷಗಾನ ಕ್ಷೇತ್ರಕ್ಕೆ ಬಾಲ ಹೆಜ್ಜೆ ಇಟ್ಟವಳು. ಐದೂವರೆ ವರ್ಷದಿಂದ ವಿಶ್ವಶಾಂತಿ ರೂಪಕಗಳನ್ನು ಪ್ರಸ್ತುತಗೊಳಿಸುತ್ತಿದ್ದಾಳೆ. ಪೌರಾಣಿಕ ಆಖ್ಯಾನಗಳ ೯ ರೂಪಕಗಳನ್ನು ಪ್ರಸ್ತುತಗೊಳಿಸುವ ಈಕೆ, ರಾಜ್ಯ, ಹೊರರಾಜ್ಯಗಳಲ್ಲಿ ೮೫೦ಕ್ಕೂ ಅಧಿಕ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾಳೆ. ಹಿರಿಯ ಕಲಾವಿದರ ಜತೆ ಬೇರೆ ಬೇರೆ ಯಕ್ಷಗಾನ ಆಖ್ಯಾನಗಳಲ್ಲೂ ಪಾತ್ರ ಮಾಡುತ್ತಿದ್ದಾಳೆ.

ಈಗಾಗಲೇ ಇಂಡಿಯಾ ಬುಕ್ ಆಪ್ ರೆಕಾರ್ಡ್‌ನಲ್ಲಿಯೂ ದಾಖಲಾಗಿದ್ದು, ಕರ್ನಾಟಕ ಬಾಲವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ, ಟೈಮ್ಸ್‌ ಆಫ್ ಇಂಡಿಯಾದ ದೇಶ ಮಟ್ಟದ ೨೧ ವರ್ಷದೊಳಗಿನ ಅನ್ ಸ್ಟಾಪೇಬಲ್ ೨೧ ಅವಾರ್ಡ್‌ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿವೆ. ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಅವಕಾಶ ಸಿಕ್ಕಿತ್ತು. ಈಗಿನ ವಿಶ್ವ ದಾಖಲಾತಿಗೆ ಸೇರಲು ದಿ ಟೈಮ್ಸ್‌ ಆಫ್ ಇಂಡಿಯಾ ಬಳಗ ಕಳೆದ ಅಕ್ಟೋಬರ್‌ನಲ್ಲಿ ನೀಡಿದ ಅನ್ ಸ್ಟಾಪೇಬಲ್ ೨೧ ಪ್ರಶಸ್ತಿ ನೆರವಾಗಿದೆ ಎಂಬುದೂ ಉಲ್ಲೇಖನೀಯ.

ಖುಷಿಯ ಸಂಗತಿ: 

ಇಂಥದೊಂದು ಗುರುತು ಸಿಕ್ಕಿದ್ದು ಖುಷಿ, ಸಂಭ್ರಮ. ಯಕ್ಷಗಾನದಿಂದಲೇ ಈ ಅವಕಾಶ ಸಿಕ್ಕಿದ್ದು ಅದಕ್ಕೇ ಇದನ್ನು ಅರ್ಪಿಸುವೆ. ಈ ದಾರಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿಯ ಕೃತಜ್ಞತೆ ಸಲ್ಲಿಸುವೆ ಎಂದು ಕಲಾವಿದೆ ತುಳಸಿ ಹೆಗಡೆ ತಿಳಿಸಿದರು.

Latest Videos
Follow Us:
Download App:
  • android
  • ios