ಅಂಜನಾದ್ರಿ ಬೆಟ್ಟಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : 50 ಕೋಟಿ ವೆಚ್ಚ
ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ನಡೆದಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ಮಾಸ್ಟರ್ ಪ್ಲಾನ್’ ಮಾಡಲಾಗಿದೆ.
ಕೊಪ್ಪಳ (ಮಾ.17): ಆಂಜನೇಯ ಜನಿಸಿರುವ ಸ್ಥಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ನಡೆದಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ಮಾಸ್ಟರ್ ಪ್ಲಾನ್’ ಮಾಡಲು ತೀರ್ಮಾನಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಈ ಸಭೆ ನಡೆಯಿತು. ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಅಪರ ಮುಖ್ಯ ಕಾರ್ಯದರ್ಶಿ . ಅತೀಕ್, ಮಹೇಂದ್ರ ಜೈನ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ನಿರ್ದೇಶಕ ಕುಮಾರ ಪುಷ್ಕರ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಸೋರ ಸುರಳ್ಕರ್ ಭಾಗವಹಿಸಿದ್ದರು.
ಐತಿಹಾಸಿಕ ಅಂಜನಾದ್ರಿ ಬೆಟ್ಟಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಥಮ ಹಂತದಲ್ಲಿ .50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಭೆ ನಿರ್ಧಾರ ಕೈಗೊಂಡಿತು. ಮುಂದಿನ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಮಂಡಿಸಿ ಅನುಮೋದನೆ ಪಡೆಯಲು ಸಹ ನಿರ್ಧರಿಸಲಾಯಿತು.
ಅಂಜನಾದ್ರಿ ಬೆಟ್ಟಕ್ಕೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಲಾಯಿತು. ಪ್ರಥಮ ಹಂತದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಕುಡಿಯುವ ನೀರು, ಶೌಚಾಲಯ, ಸ್ನಾನದ ಗೃಹ ಮತ್ತು ರಸ್ತೆ ನಿರ್ಮಾಣ ಮಾಡುವುದು. ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಅಳವಡಿಸುವುದು. ಬೆಟ್ಟದ ಕೆಳಭಾಗದಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು.
ಬೆಟ್ಟದ ಮುಂಭಾಗದಲ್ಲಿರುವ ಹುಲಿಗಿ, ಗಂಗಾವತಿ ರಾಜ್ಯ ಹೆದ್ದಾರಿಯನ್ನು 1 ಕಿಮೀ ಅಗಲೀಕರಣ ಮಾಡುವುದು. ಬೀದಿ ದೀಪಗಳನ್ನು ಅಳವಡಿಸುವುದು. ಸೇವಾ ಹಾಗೂ ಟಿಕೆಟ್ ಕೌಂಟರ್ ನಿರ್ಮಾಣ ಮಾಡುವುದು. ಪ್ರವಾಸಿಗರಿಗೆ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆ ಮಾಡುವುದು. ಮೊಬೈಲ್ ಸಂಪರ್ಕಕ್ಕಾಗಿ ಮೊಬೈಲ್ ಟವರ್ ಅಳವಡಿಸುವುದು.
ಎರಡನೇ ಹಂತದಲ್ಲಿ ಪ್ರವಾಸಿಗರು ತಂಗಲು ಯಾತ್ರಿ ನಿವಾಸ, ಹೋಟೆಲ್ ಹಾಗೂ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡುವುದು. ಬ್ಯಾಟರಿ ಚಾಲಿತ ವಾಹನಗಳನ್ನು ಖರೀದಿಸುವುದು. ತುಂಗಭದ್ರಾ ನದಿಯಲ್ಲಿ ವಾಟರ್ ಸ್ಪೋಟ್ಸ್‌ರ್, ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವುದು. ಋುಷಿಮುಖ ಪರ್ವತದಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವೇದ, ವಾಸ್ತು, ಜ್ಯೋತಿಷ್ಯ, ಗೃಹ ನಕ್ಷತ್ರ, ಭೂಕಂಪನ, ಸಮುದ್ರ ಕಂಪನ ಹಾಗೂ ಶರೀರ ಆವಯವಗಳ ಪಾಠಗಳ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯ ಪ್ರಾರಂಭಿಸುವುದು. ಸಾಣಾಪುರ ಕೆರೆ ಹತ್ತಿರ ನೀರಿನ ವಿಭಿನ್ನ ವಿನ್ಯಾಸಗಳನ್ನು ಮಾಡುವ ಲೇಸರ್ ಶೋ ಮಾಡುವುದು. ಒಟ್ಟಾರೆ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲ ಅನುಕೂಲಗಳನ್ನು ಕಲ್ಪಿಸಿಕೊಡಲು ನಿರ್ಧರಿಸಲಾಯಿತು.
ಅಂಜನಾದ್ರಿ ಪರ್ವತ ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಬಾಬಾ ಕಸರತ್ತು
ದೇಶದ 4 ಐತಿಹಾಸಿಕ ಹಾಗೂ ಪುರಾತನ ಸರೋವರಗಳಲ್ಲಿ ಪಂಪಾ ಸರೋವರ ಸಹ ಒಂದು ಆಗಿದ್ದು, ಸಮಗ್ರವಾಗಿ ಅಭಿವೃದ್ಧಿ ಮಾಡುವುದು. 101 ಬಾವಿಗಳ ಪುನಶ್ಚೇತನ ಸೇರಿದಂತೆ ಅಂಜನಾದ್ರಿ ಬೆಟ್ಟಮತ್ತು ಆನೆಗುಂದಿ ಪ್ರದೇಶದ 100 ಎಕರೆ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅಂಜನಾದ್ರಿ ಬೆಟ್ಟದಲ್ಲಿ ಒಂದು ಗೋಶಾಲೆಯಿದ್ದು, ಸಾವಿರ ದನಕರುಗಳಿವೆ. ಇನ್ನೊಂದು ಗೋಶಾಲೆ ತೆರೆಯಲು ಸಭೆ ನಿರ್ಧರಿಸಿತು.
ಅಂಜನಾದ್ರಿ ಬೆಟ್ಟಕ್ಕೆ ಪ್ರತಿದಿನ ಮೂರು ಸಾವಿರಕ್ಕೂ ಹೆಚ್ಚು ಹಾಗೂ ಮಂಗಳವಾರ ಮತ್ತು ಶನಿವಾರ ಇಪ್ಪತ್ತು ಸಾವಿರಕ್ಕೂ ಹೆಚ್ಚು ಹನುಮಂತನ ಭಕ್ತರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಇದು ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಪ್ರವಾಸಿ ತಾಣವಾಗಲಿದೆ. ಇದಕ್ಕಿಂತ ಮಿಗಿಲಾಗಿ ಅಂಜನಾದ್ರಿಯಿಂದ ಅಯೋಧ್ಯೆಯವರೆಗೂ ಸಂಪರ್ಕಕ್ಕಾಗಿಯೇ ರೈಲು ಮತ್ತು ಹೆದ್ದಾರಿ ನಿರ್ಮಾಣ ಮಾಡುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.